Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ರೈತರ ಆತ್ಮಹತ್ಯೆ ವಿಚಾರದಲ್ಲಿ ಬಿಜೆಪಿ ಹೋರಾಟ ಶೂನ್ಯ: ಪಕ್ಷದ ನಾಯಕರ ವಿರುದ್ಧವೇ ಬಿಎಸ್‌ವೈ ವಾಗ್ದಾಳಿ

yaddiಬೆಂಗಳೂರು: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ನಾಯಕ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ದಾಳಿ ನಡೆಸಿರುವ ಯಡಿಯೂರಪ್ಪ, ರೈತರ ಆತ್ಮಹತ್ಯೆ ವಿಚಾರದಲ್ಲಿ ಬಿಜೆಪಿ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಹೋರಾಟ ಏನೂ ಇಲ್ಲ. ಬಿಜೆಪಿ ಅಧಿಕೃತ ಪ್ರತಿಪಕ್ಷವಾದದರೂ ನಾವು ಸುಮ್ಮನಿದ್ದೇವೆ. ಆದರೆ ಜೆಡಿಎಸ್ ಪ್ರಮುಖ ಪ್ರತಿಪಕ್ಷವಲ್ಲದಿದ್ದರೂ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ ಎಂದು ಯಡಿಯೂರಪ್ಪ ಅವರು ದೂರವಾಣಿ ಮೂಲಕ ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಈ ಹಿಂದೆ ರೈತ ವಿಠ್ಠಲ್ ಅರಭಾವಿ ಆತ್ಮಹತ್ಯೆ ವೇಳೆ ನಾನೇ ಮುಂದೆ ನಿಂತು ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಿದ್ದೆ. ಹೋರಾಟದ ಫಲವಾಗಿ ಸರ್ಕಾರ ಮೃತನ ಕುಟುಂಬಕ್ಕೆ 10 ಲಕ್ಷ ರುಪಾಯಿ ಪರಿಹಾರ ಘೋಷಿಸಿತ್ತು. ಆದರೆ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಸುಮಾರು 60ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈವರೆಗೂ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿಲ್ಲ. ಆದರೂ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಹೋರಾಟ ನಡೆಸದೆ, ಸಿಎಂ ಸಿದ್ದರಾಮಯ್ಯ ಅವರಿಗೆ ನೆಮ್ಮದಿಯಾಗಿ ನಿದ್ರೆ ಮಾಡಲು ಅವಕಾಶ ನೀಡಿದ್ದೀರಿ ಎಂದು ಬಿಎಸ್‌ವೈ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಹ್ಲಾದ್ ಜೋಶಿ ಅವರು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ತೆರಳಿ ಸಮಸ್ಯೆ ಆಲಿಸೋಣ ಎಂದಿದ್ದರು. ಆದರೆ ಇದಕ್ಕೆ ಒಪ್ಪದ ಯಡಿಯೂರಪ್ಪ ಅವರು, ನಿಮ್ಮ ಪಾಡಿಗೆ ನೀವು ಹೋಗಿ, ನಾನೂ ಹೋಗುತ್ತೇನೆ ಎಂದಿದ್ದಾರೆ. ಹೀಗಾಗಿ ರೈತರ ಸಮಸ್ಯೆ ಆಲಿಸಲು ಬಿಎಸ್‌ವೈ ಹೊರತುಪಡಿಸಿ, ಬಿಜೆಪಿ ನಾಯಕರ ಆರು ತಂಡ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಕೆ.ಎಸ್.ಈಶ್ವರಪ್ಪ, ಆರ್,ಅಶೋಕ್, ಸಿ.ಟಿ.ರವಿ ಹಾಗೂ ಕೆ.ಬಿ.ಶಾಣಪ್ಪ ನೇತೃತ್ವದಲ್ಲಿ ತಂಡಗಳ ರಚನೆ ಮಾಡಲಾಗಿದ್ದು, ಈ ತಂಡಗಳು ಮೃತ ರೈತರ ಮನೆಗಳಿಗೆ ಭೇಟಿ ನೀಡಲಿವೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಪೂರ್ವನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಈ ತಂಡದಲ್ಲಿ ಇಲ್ಲ. ಜುಲೈ 25 ಮತ್ತು 26ರಂದು ಯಡಿಯೂರಪ್ಪ ಅವರು ದೆಹಲಿಯಲ್ಲಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

No Comments

Leave A Comment