Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ನಾಲ್ಕು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಖಾಯಂಗೊಳಿಸಿದೆ.

2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ.

2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. ಅದರ ಮರು ವರ್ಷ ದೆಹಲಿ ಹೈಕೋರ್ಟ್ ಕೇಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿದೆ.

ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ನ್ಯಾಯಮೂರ್ತಿ ಆರ್ ಭಾನುಮತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಇನ್ನು ಡಿಸೆಂಬರ್ 16, 2012ರಂದು ನಡೆದಿದ್ದ ಅತ್ಯಾಚಾರದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಕಳೆದ ಆಗಸ್ಟ್ ನಲ್ಲಿ ವಿನಯ್ ಶರ್ಮಾ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಇನ್ನೊಬ್ಬ ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದಾನೆ. ಬಾಲಾಪರಾಧಿ ಕಾಯ್ದೆ ಅಡಿ ಆತ ಬಿಡುಗಡೆಯಾಗಿದ್ದ. ಸದ್ಯ ಕಾನೂನಿಗೆ ತಿದ್ದುಪಡಿ ತಂದಿದ್ದು, ಹದಿನಾರರಿಂದ ಹದಿನೆಂಟು ವರ್ಷದ ಮಧ್ಯೆ ಇರುವವರು ಕ್ರೂರ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ ಅವರನ್ನು ವಯಸ್ಕರು ಎಂದೇ ಪರಿಗಣಿಸಲಾಗುತ್ತದೆ.

No Comments

Leave A Comment