Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಲೋಕಲ್‌ ಮೈತ್ರಿ ಖತಂ;ಕಾಂಗ್ರೆಸ್‌ ಜತೆ ಸಂಘರ್ಷರಹಿತ ಹೋರಾಟ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಳ್ಳದೆ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧೆಗಿಳಿಯಲು ಜೆಡಿಎಸ್‌ ನಿರ್ಧರಿಸಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ತ್ರಿಕೋನ ಸ್ಪರ್ಧೆ ಖಚಿತವಾಗಿದೆ.

ಜೆಡಿಎಸ್‌ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಭಾನುವಾರ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಸಚಿವರು, ಶಾಸಕರು ಮತ್ತು ಪ್ರಮುಖರ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಕಾಂಗ್ರೆಸ್‌ ಜತೆಗಿನ ಹೋರಾಟ ಸಂಘರ್ಷಕ್ಕೆ ಎಡೆಮಾಡಿಕೊಡದಂತೆ ಸೌಹಾರ್ದಯುತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಮುಖಂಡರಿಗೆ ಸೂಚನೆ ನೀಡಲಾಗಿದೆ.

ರಾಜ್ಯಾಧಿಕಾರಕ್ಕೆ ಮಾಡಿಕೊಂಡ ಮೈತ್ರಿಯನ್ನು ಲೋಕಸಭೆ ಚುನಾವಣೆಯಲ್ಲೂ ಮುಂದುವರಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ತೀರ್ಮಾನಿಸಿತ್ತು. ಆದರೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿ ಬೇಡ ಎಂದು ಆರಂಭದಿಂದಲೂ ಎರಡೂ ಪಕ್ಷಗಳು ಹೇಳಿಕೊಂಡು ಬಂದಿದ್ದವು. ಮಾಜಿ ಪ್ರಧಾನಿ ದೇವೇಗೌಡರು ಇದನ್ನು ಬಹಿರಂಗವಾಗಿಯೇ ಹೇಳಿದ್ದರು. ಅಲ್ಲದೆ, ಇತ್ತೀಚೆಗೆ ಕಾಂಗ್ರೆಸ್‌ ಕೂಡ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಮೈತ್ರಿ ಮುಂದುವರಿಸದಿರಲು ತೀರ್ಮಾನಿಸಿತ್ತು. ಇದೀಗ ಜೆಡಿಎಸ್‌ ಕೂಡ ಅದೇ ನಿರ್ಧಾರ ಕೈಗೊಂಡಿದೆ.

ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚು ಸ್ಥಾನಗಳು ಇರುವುದರಿಂದ ಹೊಂದಾಣಿಕೆ ಕಷ್ಟವಾಗುತ್ತದೆ. ಶನಿವಾರ ತಮ್ಮನ್ನು ಭೇಟಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರೂ ಇದೇ ಮಾತು ಹೇಳಿದ್ದಾರೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದರೆ, ಕಾಂಗ್ರೆಸ್‌ ಜತೆಗಿನ ಸ್ಪರ್ಧೆ ಯಾವುದೇ ತಿಕ್ಕಾಟ ಅಥವಾ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿರುತ್ತದೆ. ಜತೆಗೆ ಮೈತ್ರಿ ಸರ್ಕಾರಕ್ಕೆ ಆತಂಕ ಉಂಟಾಗದಂತೆ ಇರುತ್ತದೆ. ಆ. 17ರಿಂದ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಹೇಳಿದರು.

No Comments

Leave A Comment