Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಮಳೆಯ ರೌದ್ರಾವತಾರ: ಆಂಧ್ರಪ್ರದೇಶ, ತೆಲಂಗಾಣದಲ್ಲಿ ಜನಜೀವನ ಅಸ್ತವ್ಯಸ್ತ: 22 ಸಾವು

ಹೈದರಾಬಾದ್/ತೆಲಂಗಾಣ: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.

ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಮುಂದಿನ 24 ಗಂಟೆಗಳವರೆಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ವರದಿ ಹೇಳಿದೆ.

ಹೈದರಾಬಾದ್ ನಲ್ಲಿ 11.30ರವರೆಗೆ ದಾಖಲೆಯ 192 ಮಿಲಿ ಮೀಟರ್ ಮಳೆಯಾಗಿದೆ. ಕೃಷ್ಣಾ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಕ್ಷಣಾ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದೆ.

ತೆಲಂಗಾಣದಲ್ಲಿ ಗುರುವಾರದವರೆಗೆ ರಜೆ:

ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment