ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಸಿಐಡಿ ತನಿಖೆ ಆದೇಶಿಸಿದ ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಸ್ವತಃ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ಸ್ಫೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದರು.
ಇಂದು ದುರಂತ ನಡೆದ ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮಕ್ಕೆ ತೆರಳಿ ಘಟನಾ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ ಬೊಮ್ಮಾಯಿ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಬೊಮ್ಮಾಯಿ, ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇನೆ. ಸಿಐಡಿ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಇನ್ನು ಸಚಿವರ ಭೇಟಿ ವೇಳೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಅಧಿಕಾರಿಗಳಿಂದ ಗೃಹ ಸಚಿವರು ಮಾಹಿತಿ ಕಲೆ ಹಾಕಿದರು.