ಜಾರಕಿಹೊಳಿ ಬಂಧನಕ್ಕೆ ಕಾಂಗ್ರೆಸ್ ಪ್ರತಿಭಟನೆ: ಡಿಕೆಶಿ ರಾಜೀನಾಮೆಗೆ ಸಾಹುಕಾರ್ ಬೆಂಬಲಿಗರ ಒತ್ತಾಯ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಸರ್ಕಾರ ಎಸ್ ಐಟಿ ಮೂಲಕ ಅತ್ಯಾಚಾರ ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಮೇಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಅತ್ತ ಬೆಳಗಾವಿಯ ಗೋಕಾಕ್ ನಲ್ಲಿ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಮೇಶ್ ಜಾರಕಿಹೊಳಿ ಪರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಅಣಕು ಶವಯಾತ್ರೆ ನಡೆಸಿ, ಅದನ್ನು ದಹಿಸಿದ ಪ್ರತಿಭಟನಾಕಾರರು, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿರುವ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಿ.ಡಿ. ಪ್ರಕರಣದಲ್ಲಿರುವ ಯುವತಿ ಪೋಷಕರು ಡಿ. ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇಡೀ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ ನಾಯಕ ಯಾರು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಹೀಗಾಗಿ ಶಿವಕುಮಾರ್ ನೈತಿಕ ಹೊಣೆ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.