ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ,15ಕ್ಕೂ ಹೆಚ್ಚು ಮಂದಿ ಸಾವು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ
ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 15ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಇಂದು ಬೆಳಗ್ಗೆ ಅಯೋಧ್ಯೆಯ ಕಡೆ ಬರುತ್ತಿದ್ದ ಬಸ್ ಮುಂಬದಿಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
2 ಲಕ್ಷ ಪರಿಹಾರ ಘೋಷಣೆ
ಘಟನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ.
ಬಾರಾಬಂಕಿ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಸಂಭವಿಸಿದ ಸಾವು ಅತ್ಯಂತ ನೋವು ತಂದಿದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಳಿ ಎಂದು ಶ್ರೀರಾಮನನ್ನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.