ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಿರುವ ನಡುವಲ್ಲೇ. 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ರಾಷ್ಟ್ರದಲ್ಲಿ ಕೋವಿಡ್ 19 ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗದುಕೊಳ್ಳಲಾಗಿದೆ. ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡವರು ಅದೇ ಲಸಿಕೆ ಹಾಕಿಸಿಕೊಳ್ಳಬೇಕು. ಇದರಲ್ಲಿ ಮಿಕ್ಸ್ ಅಂಡ್ ಮ್ಯಾಚ್ ಇರುವುದಿಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.