Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಸೆಪ್ಟೆಂಬರ್ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದರು.

ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಬಾಕಿ ಉಳಿದಿರುವ ಯೋಜನೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡದರುಎಂದು ಮೂಲಗಳು ತಿಳಿಸಿವೆ.

ಬೈರಗೊಂಡ್ಲು (ತುಮಕೂರಿನ) ಜಲಾಶಯಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯೋಜನೆ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. ಎರಡು ತಾಲ್ಲೂಕಿನ ರೈತರು ತಮ್ಮ ಭೂಮಿಗೆ ಒಂದೇ ಬೆಲೆಗೆ ಬೇಡಿಕೆ ಇಟ್ಟಿದ್ದರಿಂದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಕಷ್ಟವಾಗುತ್ತಿದೆ ಎನ್ನಲಾಗುತ್ತಿದೆ.

ಬೈರಗೊಂಡ್ಲುವಿನಲ್ಲಿ ನೀರು ಸಂಗ್ರಹಣೆ ಕಡಿಮೆಯಾದರೆ ತಲೆಕೆಡಿಸಿಕೊಳ್ಳಬೇಡಿ, ಸಂಗ್ರಹ ಸಾಮರ್ಥ್ಯ ಕಡಿಮೆಯಾದರೂ ನಿರಂತರ ನೀರು ಪೂರೈಕೆ ಮಾಡಬಹುದು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ. ಜಲಾಶಯಕ್ಕೆ ದೊಡ್ಡಬಳ್ಳಾಪುರದಲ್ಲಿ ಭೂಮಿ ಸ್ವಾಧೀನಪಡಿಸಿಕೊಂಡು ಯೋಜನೆಗೆ ಮುಂದಾಗುವಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದು, ಇದರಿಂದ ಜಲಾಶಯದ ವೆಚ್ಚ ಮತ್ತು ಗಾತ್ರ ಶೇ.50ರಷ್ಟು ಕಡಿಮೆಯಾಗಲಿದೆ. ಪರಿಣಾಮ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ವಿವಿಧ ತಾಲ್ಲೂಕುಗಳು ಮತ್ತು ಜಿಲ್ಲೆಗಳ ರೈತರಿಗೆ ಏಕರೂಪದ ಪರಿಹಾರವನ್ನು ನೀಡುವುದರಿಂದ ರಾಜ್ಯದ ಇತರ ದೊಡ್ಡ ನೀರಾವರಿ ಯೋಜನೆಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತಾಗಲಿದ್ದು, ಈ ಹಿನ್ನೆಲೆಯಲ್ಲಿ ರೈತರ ಆಗ್ರಹಕ್ಕೆ ಅಧಿಕಾರಿಗಳು ಮಣಿಯುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಯೋಜನೆ ಬದಲಾಯಿಸುವ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು ವಿರೋಧಿಸುವ ಸಾಧ್ಯತೆಗಳಿವೆ.

ಸಭೆಯಲ್ಲಿ ಸರಕಾರದಿಂದ ಸೂಕ್ತ ಅನುಮೋದನೆ ಪಡೆಯದೇ ಕೆರೆ ತುಂಬಿಸುವ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಗೆ ವಹಿಸಿರುವ ಬಗ್ಗೆ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಬಳಿಕ ಅಧಿಕಾರಿಗಳು ಅಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ ಬಳಿಕ, ಕಾಮಗಾರಿಯ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

No Comments

Leave A Comment