ಹುಬ್ಬಳ್ಳಿ: ಲಾರಿ-ಪ್ರಯಾಣಿಕ ಬಸ್ ನಡುವೆ ಭೀಕರ ಅಪಘಾತ; 8 ಸಾವು. 26 ಮಂದಿಗೆ ಗಾಯ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಪ್ರಯಾಣಿಕ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.
ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ (Hubli-Dharwad) ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್, ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಮೃತಪಟ್ಟರು. ಖಾಸಗಿ ಬಸ್‌ನಲ್ಲಿದ್ದ ನಾಲ್ವರು ಮೃತಪಟ್ಟರು. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.
ಸರಣಿ ಅಪಘಾತ
‘ಸದ್ಯದ ಮಾಹಿತಿ ಪ್ರಕಾರ, ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಟೂರಿಸ್ಟ್ ಬಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.