Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಉಡುಪಿಯಲ್ಲೂ ಧಾರಾಕಾರ ವರ್ಷಧಾರೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ.

ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ, ನೀರುಮಾರ್ಗಗಳಲ್ಲೆಲ್ಲಾ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಹೊರಗೆ ವ್ಯವಹಾರಕ್ಕೆ, ಕಚೇರಿಗೆಂದು ವಾಹನಗಳಲ್ಲಿ ಹೋದವರಿಗೆ ಅಲ್ಲಲ್ಲಿ ನೀರು ತುಂಬಿಕೊಂಡು ಚಲಿಸಲಾಗದೆ ಸಿಕ್ಕಿಹಾಕಿಕೊಂಡಿದ್ದಾರೆ. ತಗ್ಗು ಪ್ರದೇಶದ ಮನೆಗಳು, ಕಟ್ಟಡಗಳಿಗೆ ನೀರು ನುಗ್ಗಿವೆ.ಕೊಟ್ಟಾರ ಚೌಕಿ ಬಳಿ ರಾಜಕಾಲುವೆ ತುಂಬಿ ಹರಿದಿದೆ.ಮಂ

ಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮರವೂರು ಸೇತುವೆ ಹತ್ತಿರದ ರಸ್ತೆಗಳು ಧಾರಾಕಾರ ಮಳೆಗೆ ಹಾನಿಗೀಡಾಗಿದ್ದು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಜೆ ಘೋಷಣೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರೆ ಎಲ್ಲಾ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಾಲೆ ತಲುಪಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದ್ದು, ತಾಲೂಕುಗಳಲ್ಲಿ ತಹಶೀಲ್ದಾರ್‌ಗಳು ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಇಂದಿನ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವಂತೆ ಆದೇಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಆದಾಗ್ಯೂ, ಈಗಾಗಲೇ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುತ್ತಿದ್ದರೆ ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ. ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಈವರೆಗೆ ಯಾವುದೇ ಹಾನಿ ಸಂಭವಿಸಿಲ್ಲ. ಭಾರೀ ಮಳೆಯ ಹಿನ್ನೆಲೆಯಲ್ಲಿ ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆಗೆ ಮಂಗಳೂರಿನ ಹಲವು ಭಾಗಗಳಲ್ಲಿ ತಗ್ಗು ಪ್ರದೇಶಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿವೆ.

ಉಡುಪಿಯಲ್ಲಿಯೂ ಮಳೆ: ಮಂಗಳೂರಿನಂತೆ ಉಡುಪಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಮುಂದುವರಿದಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ನದಿಗಳಲ್ಲಿ ನೀರಿನ ಮಟ್ಟ ಸ್ವಲ್ಪ ಹೆಚ್ಚಳವಾಗಿದೆ, ಆದರೆ ನದಿ ತೀರದ ಪ್ರದೇಶಗಳಲ್ಲಿ ಇನ್ನೂ ಪ್ರವಾಹ ಉಂಟಾಗಿಲ್ಲ ಎಂಬುದು ಸಮಾಧಾನ ಸಂಗತಿ.

No Comments

Leave A Comment