Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ನೇಮಕಾತಿ ಹಗರಣ: ಹಲವೆಡೆ ಸಿಐಡಿ ದಾಳಿ, 38 ಶಿಕ್ಷಕರ ಬಂಧನ

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಬುಧವಾರ ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ 38 ಶಿಕ್ಷಕರನ್ನು ಬಂಧಿಸಿದ್ದು, ಈ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 60ಕ್ಕೆ ಏರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಬಂಧಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮುನ್ನ ಸಿಐಡಿ ಅಧಿಕಾರಿಗಳು ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿದಂತೆ 22 ಜನರನ್ನು ಬಂಧಿಸಿದ್ದರು ಮತ್ತು ಬುಧವಾರದ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 60ಕ್ಕೆ ಏರಿದೆ. ಬಂಧಿತ ಶಿಕ್ಷಕರಲ್ಲಿ ಕೋಲಾರದಲ್ಲಿ 24, ಬೆಂಗಳೂರು ದಕ್ಷಿಣದಲ್ಲಿ ಐವರು, ಚಿಕ್ಕಬಳ್ಳಾಪುರದಲ್ಲಿ ಮೂವರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಐವರು ಕೆಲಸ ಮಾಡಿದ್ದಾರೆ. 18 ಡಿವೈಎಸ್ಪಿಗಳು ಮತ್ತು 14 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಸಿಐಡಿ ತಂಡಗಳು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ 51 ಸ್ಥಳಗಳಲ್ಲಿ ಬುಧವಾರ ದಾಳಿ ನಡೆಸಿ ಬಂಧಿಸಿವೆ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2012-13 ಮತ್ತು 2014-15ರಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಈ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಆಗಸ್ಟ್‌ನಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಸೆಪ್ಟೆಂಬರ್‌ನಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಿತ್ತು. ಅರ್ಹತೆ ಇಲ್ಲದಿದ್ದರೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಮತ್ತು ಆಯ್ಕೆಯಾದ ಕೆಲವು ಶಿಕ್ಷಕರು ಪರೀಕ್ಷೆಗೆ ಹಾಜರಾಗಿಲ್ಲ ಎಂದು ಆರೋಪಿಸಲಾಗಿದೆ.

ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಹಗರಣದ ಬಗ್ಗೆ ಕೂಲಂಕುಷ ತನಿಖೆಯನ್ನು ಪ್ರಾರಂಭಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿರುವುದರಿಂದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರದ ವಿರುದ್ಧ ‘ಪೇಸಿಎಂ’ ಮತ್ತು ‘40% ಕಮಿಷನ್’ ಮುಂತಾದ ಅಭಿಯಾನಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆ ಮೂಲಕ ಪ್ರತಿದಾಳಿ ಮಾಡುವ ಸಾಧ್ಯತೆಯಿದೆ.

No Comments

Leave A Comment