ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ನಾಯಕಿ
ಮಂಗಳೂರು: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಫೋಟೊ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಅಪ್ಲೋಡ್ ಮಾಡಿದ ವ್ಯಕ್ತಿಯ ವಿರುದ್ಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ನಿವಾಸಿ ಶ್ಯಾಮ ಸುದರ್ಶನ್ ಭಟ್ ಎಂಬುವವರ ವಿರುದ್ಧ ಕುಳಾಯಿ ಅವರ ದೂರಿನ ಆಧಾರದ ಮೇಲೆ, ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಸಾರ ಮಾಡುವ ಮೂಲಕ ಮಹಿಳೆಯ ಘನೆತೆಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅಕ್ಟೋಬರ್ 18 ರಂದು ಸುರತ್ಕಲ್‌ನಲ್ಲಿ ಟೋಲ್ ಗೇಟ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತೆಗೆದ ತನ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ವ್ಯಕ್ತಿಯೊಬ್ಬರು ಎಡಿಟ್ ಮಾಡಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಸಭ್ಯ ರೀತಿಯಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಕುಳಾಯಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿಯಿಂದ ಸುತ್ತುವರೆದಿರುವ ಆರೋಪಿಯು ತನ್ನ ಚಿತ್ರವನ್ನು ಅಶ್ಲೀಲ ಕಮೆಂಟ್‌ನೊಂದಿಗೆ ಪೋಸ್ಟ್ ಮಾಡಿದ್ದಾರೆ. ತನ್ನ ಘನತೆಗೆ ಧಕ್ಕೆ ತಂದ, ಅವಮಾನಿಸಿದ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತೆಯೂ ಆಗಿರುವ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರವೇ ಆತನನ್ನು ಪತ್ತೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.