ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು: ಸಂಜೆ 5 ಗಂಟೆಗೆ ಅಂತ್ಯಕ್ರಿಯೆ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರು ಭಾಗಿ
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತ ಸಮೂಹ ಈ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.