Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕರ್ನಾಟಕದ ಕರಾವಳಿ ಪ್ರದೇಶಕ್ಕೆ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

ಮಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದು ಉದ್ಯೋಗ ಸೃಷ್ಟಿ, ಹೂಡಿಕೆಗಳನ್ನು ಆಕರ್ಷಿಸುವುದು, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸಲು ಒತ್ತು ನೀಡಿದೆ.

ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು ಪ್ರಣಾಳಿಕೆಯನ್ನು ಪ್ರಕಟಿಸಿದರು.

ಈ ವೇಳೆ ಮಾತನಾಡಿದ ಹರಿಪ್ರಸಾದ್, ಈ ಭಾಗದ ಅಭಿವೃದ್ಧಿಗೆ 2,500 ಕೋಟಿ ರೂ.ಗಳ ಬಜೆಟ್‌ನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗುವುದು ಎಂದರು.

ಈ ವರ್ಷ ಮೇ ತಿಂಗಳೊಳಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಿಗದಿಯಾಗಿದೆ.

ಸಮಾರಂಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಕೇವಲ ಭರವಸೆ ನೀಡುವುದಲ್ಲದೆ, ಸಮರ್ಪಕವಾಗಿ ಹಣ ಬಿಡುಗಡೆ ಮಾಡಿ ಈಡೇರಿಸುವುದೂ ಗೊತ್ತಿದೆ. ಬಿಜೆಪಿಯವರು ಕೇವಲ ಸುಳ್ಳಿನ ಮೂಲಕ ಜನರನ್ನು ವಶೀಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಜನರನ್ನು ವಿಭಜಿಸಲು ಉತ್ಸುಕರಾಗಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಗುತ್ತಿಗೆದಾರರು ಶೇ.40 ಕಮಿಷನ್ ಸರ್ಕಾರ ಎಂದು ಹೆಸರಿಟ್ಟಿದ್ದಾರೆ ಎಂದು ಆರೋಪಿಸಿದರು.

ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಆಡಳಿತದಲ್ಲಿ ಬದಲಾವಣೆ ತರುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ಪಕ್ಷವು ಬಹುಮತ ಸಾಧಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಈ ವೇಳೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುಜ್ರೇವಾಲಾ, ಕರಾವಳಿಯನ್ನು ಬಿಜೆಪಿ ಕೋಮುವಾದದ ಕಾರ್ಖಾನೆಯನ್ನಾಗಿ ಮಾಡಿದ್ದು, ಅವರ ಸುಳ್ಳು ಕೃತ್ಯಗಳಿಗೆ ತಕ್ಕ ಉತ್ತರ ನೀಡುವ ಸಮಯ ಬಂದಿದೆ. ನಾವು ಬೆಲೆ ಏರಿಕೆಯ ಬಗ್ಗೆ ಮಾತನಾಡುವಾಗ, ಬಿಜೆಪಿ ಹಿಂದೂಗಳು ಮತ್ತು ಮುಸ್ಲಿಮರ ಬಗ್ಗೆ ಮಾತನಾಡುತ್ತದೆ. ನಾವು ಜನರನ್ನು ಸಂಪರ್ಕಿಸಲು ಪ್ರಯತ್ನಿಸುತ್ತೇವೆ. ಆದರೆ, ಅವರು ಜನರ ಸಂಪರ್ಕವನ್ನು ಕಡಿತಗೊಳಿಸುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದರು. ಬದಲಾವಣೆ ತರಲು ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಪಕ್ಷ ತಂದಿದೆ ಎಂದರು.

ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕರಾದ ಮೊಹಿಯುದ್ದೀನ್ ಬಾವಾ, ರಮಾನಾಥ್ ರೈ, ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ ಸೇರಿದಂತೆ ಕರಾವಳಿಯ ಅವಳಿ ಜಿಲ್ಲೆಗಳ ಹಲವಾರು ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No Comments

Leave A Comment