ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ
ಉಡುಪಿ:ಮಾ 30. ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಧೀನ ಸಂಸ್ಥೆಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರು ಪ್ರಾಮಾಣಿಕರಾಗಿ ಕರ್ತವ್ಯ ನಿರ್ವಹಿಸಿ ಕೊಂಡು ಬರುತ್ತಿದ್ದಾರೆ. ಆದರೆ ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವುದು ಸಂಘದ ಗಮನಕ್ಕೆ ಬಂದಿದೆ.
ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು ಅಥವಾ ಪ್ರಸಾರ ಮಾಡಲು ಹಣ ನೀಡಬೇಕಾದ ಅಗತ್ಯ ಇರುವುದಿಲ್ಲ. ಆದರೂ ಕೆಲವು ನಕಲಿ ಪತ್ರಕರ್ತರು ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ದಂಧೆಗೆ ಇಳಿದಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿ ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿಗೆ ಇಳಿಯುವ ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅದೇ ರೀತಿ ಪ್ರಸ್ತುತ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಈ ಹಿನ್ನೆಲೆಯಲ್ಲಿ ಕೆಲವು ವ್ಯಕಿತಿಗಳು ತಮ್ಮ ವಾಹನಗಳಿಗೆ ಮಿಡಿಯಾ, ಪ್ರೆಸ್ ಸ್ಟಿಕ್ಕರ್ ಹಾಕಿಕೊಂಡು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿಯ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು ಮತ್ತು ಅದರಲ್ಲಿ ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘದಿಂದ ಸದಸ್ಯರುಗಳಿಗೆ ಗುರುತಿನ ಚೀಟಿ ಮತ್ತು ವಾಹನ ಗಳಿಗೆ ಅಧಿಕೃತ ಮಿಡಿಯಾ ಸ್ಟಿಕ್ಕರನ್ನು ನೀಡಲಾಗಿದೆ. ಪತ್ರಕರ್ತರ ಹೆಸರಿನಲ್ಲಿ ಯಾರೇ ಹಣ ವಸೂಲಿಗೆ ಬಂದರೆ ಅಂತಹವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಿಗೆ ದೂರು ನೀಡಬೇಕು ಮತ್ತು ನಮ್ಮ ಸಂಘದ ಗಮನಕ್ಕೂ ತರಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.