
ಸಿಎಂ ಆಯ್ಕೆ ಪ್ರಹಸನ ಮುಕ್ತಾಯ: ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ; ಎಐಸಿಸಿ ಅಧಿಕೃತ ಘೋಷಣೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ನಾಯಕರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಹೇಳಿದ್ದಾರೆ.
ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದು ಹೇಳಿದರು.
ಡಿಕೆ ಶಿವಕುಮಾರ್ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದಾರೆಂದು ತಿಳಿಸಿದರು.