Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆಗೆ ರೈತ ಸಂಘ ಕರೆ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಭದ್ರತಾ ಸಿಬ್ಬಂದಿ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ ಮತ್ತು ಯಾವುದೇ ಅಹಿತಕರ ಘಟನೆ ತಡೆಯಲು ಹೆಚ್ಚುವರಿ ಪಿಕೆಟ್‌ಗಳನ್ನು ಹಾಕಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಪಿಕೆಟ್‌ಗಳನ್ನು ಸಹ ಸ್ಥಾಪಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಒಕ್ಕೂಟ SKM ಗುರುವಾರ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಭಾರತೀಯ ಕುಸ್ತಿಪಟುಗಳು ಮತ್ತು ಸಮಾಜದ ಇತರ ಎಲ್ಲ ವರ್ಗಗಳಿಂದ ಪ್ರತಿಭಟನೆ ನಡೆಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಭದ್ರಪಡಿಸುವುದು ಮತ್ತು ಬಿಜೆಪಿ ಸಂಸದರೂ ಆಗಿರುವ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುವ ಉದ್ದೇಶದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಎಸ್‌ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.

No Comments

Leave A Comment