ಆಹ್ವಾನ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಿವಾಸಕ್ಕೆ ಭಜರಂಗ್ ಪೂನಿಯಾ, ಸಾಕ್ಷಿ ಮಲ್ಲಿಕ್ ಭೇಟಿ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.
ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದ ಅನುರಾಗ್ ಠಾಕೂರ್ ಅವರು, ಮಾತುಕತೆಗೆ ಕುಸ್ತಿಪಟುಗಳಿಗೆ ಆಹ್ವಾನ ನೀಡಿದ್ದರು.
ಆಹ್ವಾನ ಬೆನ್ನಲ್ಲೇ ಇದೀಗ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಕಳೆದ ಶನಿವಾರ ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬ್ರಿಜ್ ಭೂಷಣ್ ಲೈಂಗಿಕ ದೌರ್ಜನ್ಯದ ವಿರುದ್ಧ ಚರ್ಚಿಸಿದ್ದರು.