ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ- ಕಬಿನಿ ಒಳಹರಿವು ಹೆಚ್ಚಳ

ಬೆಂಗಳೂರು: ತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿ ಕರಾವಳಿ, ಮಲೆನಾಡು ಸೇರಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಕಾಣಿಸಿಕೊಂಡಿದೆ.

ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದ್ದು, 11 ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಜುಲೈ ಅಂತ್ಯದಲ್ಲಿ ಭಾರೀ ಮಳೆಯಾಗುವ ಸಂಭವ ಕಾಣಿಸುತ್ತಿದ್ದು, ಕೆರೆ ಕಟ್ಟೆಗಳು ಅಷ್ಟೇ ಅಲ್ಲದೆ ರಾಜ್ಯದ ಜಲಾಶಯಗಳು ಭರ್ತಿಯಾಗುವ ನಿರೀಕ್ಷೆ ಸೃಷ್ಟಿಸಿದೆ.

ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ. ಗಾಂಧಿ ಮೈದಾನ, ಪ್ಯಾರಲ್ ರಸ್ತೆಯ ಮೇಲೆ ನದಿ ರಭಸವಾಗಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದಿಂದ ಗಾಂಧಿ ಮೈದಾನಕ್ಕೆ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದೆ.

ತುಂಗಾ ನದಿ ಸಮೀಪ ಇರುವ ಕಪ್ಪೆಶಂಕರ ದೇವಾಲಯ ಸಂಪೂರ್ಣ ಮುಳುಗಿದ್ದು, ಅದರ ಮೇಲೆ ಸುಮಾರು ಐದು ಅಡಿ ನೀರು ತುಂಬಿದೆ. ನರಸಿಂಹವನದ ಗುರುನಿವಾಸಕ್ಕೆ ತೆರಳುವ ಅಕ್ಕಪಕ್ಕದಲ್ಲಿರುವ ಅಡಕೆ ತೋಟಗಳು ಹಾಗೂ ಸಂಧ್ಯಾಮಂಟಪ ಜಲಾವೃತವಾಗಿವೆ. ತಾಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಕೇರಳದ ವಯನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಬಳಿ ಇರುವ ಕಬಿನಿ ಜಲಾಶಯ 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ‌ ‌ನೀರಿನ ಮಟ್ಟ 78.31 ಅಡಿ, ಜಲಾಶಯದ ಇಂದಿನ‌ ಒಳಹರಿವು 20,749 ಕ್ಯೂಸೆಕ್‌, ಜಲಾಶಯದ ಹೊರಹರಿವು 3333 ಕ್ಯೂಸೆಕ್, ಗರಿಷ್ಠ 19.52 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಇದೆ. ಜಲಾಶಯದಲ್ಲಿ ಸದ್ಯಕ್ಕೆ 16.09 ಟಿಎಂಸಿ ನೀರು ಸಂಗ್ರಹವಾಗಿದೆ.

ಇನ್ನು ಕೃಷ್ಣ, ಭೀಮಾ, ವರದಾ, ದೂದಗಂಗಾ, ಮಲಪ್ರಭಾ, ತುಂಗಾ, ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿ ಹಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಆಸ್ತ ವ್ಯಸ್ತಗೊಂಡಿದೆ. ಭಾರೀ ಮಳೆ ಕಾರಣ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ.

ಹಾರಾಷ್ಟ್ರ-ಬೆಳಗಾವಿ ಭಾಗದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗ್ತಿದೆ. ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ನಿರಂತರ ಮಳೆಗೆ (Rain) ಎರಡು ಮನೆಯ ಗೋಡೆಗಳು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟಪ್ರಭಾ ನದಿ ಅಪಾಯಮಟ್ಟದಲ್ಲಿ ಹರೀತಿದೆ. ಹಿಡಕಲ್ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದೆ. ಹುಕ್ಕೇರಿಯ ಹುನ್ನೂರು ಗ್ರಾಮದ ಹಿಡಕಲ್ ಡ್ಯಾಮ್ ನೀರಿನಲ್ಲಿದ್ದ ವಿಠಲ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ.

ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆ ಆಗಿದೆ. ಸೇತುವೆ ಮೇಲೆ 2 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದ ಕಳಸ-ಹೊರನಾಡು ಸಂಪರ್ಕ ಬಂದ್ ಆಗಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ಮೂಕನಮನೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.. ಜಲಪಾತ ವೀಕ್ಷಣೆಗೆ ಬಂದು ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿಯಲ್ಲಿ ಕಾವೇರಿ ನದಿಯ ಪ್ರತಾಪಕ್ಕೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರುಸೇತುವೆ ಮುಳುಗಡೆಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಸ್ನಾನಘಟ್ಟ 2ನೇ ಬಾರಿಗೆ ಮುಳುಗಡೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

No Comments

Leave A Comment