ಮಳೆ, ಭೂಕುಸಿತ: ಉತ್ತರಾಖಂಡ, ಹಿಮಾಚಲದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲು ಕೇಂದ್ರ ಚಿಂತನೆ
ನವದೆಹಲಿ: ಭಾರಿ ಮಳೆ ಮತ್ತು ಭೂಕುಸಿತದಿಂದ ಪದೇಪದೆ ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ.
ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಜ್ಞರ ಸಮಿತಿ ರಚಿಸಲಿದೆ ಮತ್ತು ನೈಸರ್ಗಿಕ ವಿಕೋಪಗಳಿಗೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ವಿಭಾಗವನ್ನು ತೆರೆಯಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದ್ದಾರೆ.
“ಅತಿವೃಷ್ಟಿ ಮತ್ತು ಭೂಕುಸಿತಕ್ಕೆ ಒಳಗಾಗುವ ಪ್ರದೇಶಗಳಲ್ಲಿ ಅಂತರಾಷ್ಟ್ರೀಯ ನಿಯಮಗಳ ಪ್ರಕಾರ ರಸ್ತೆಗಳು, ಸೇತುವೆಗಳು ಮತ್ತು ಸುರಂಗಗಳನ್ನು ನಿರ್ಮಿಸುವ ಅವಶ್ಯಕತೆಯಿದೆ. ನಾವು ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸುವುದಕ್ಕೆ ಆದ್ಯತೆ ನೀಡುತ್ತೇವೆ” ಎಂದು ಗಡ್ಕರಿ ತಿಳಿಸಿದ್ದಾರೆ.