ತೋಷಖಾನಾ ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ
ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಶನಿವಾರ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್(PTI) ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆಯಾಗಿದೆ.
ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪುನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿದರೆ ಹೆಚ್ಚುವರಿ ಆರು ತಿಂಗಳು ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಸಹ ಎಚ್ಚರಿಕೆ ನೀಡಲಾಗಿದೆ.
ಇಸ್ಲಾಮಾಬಾದ್ ಪೊಲೀಸರು ಇಮ್ರಾನ್ ಖಾನ್ ಅವರನ್ನು ಬಂಧಿಸಲು ಬಂಧನ ವಾರಂಟ್ ಹೊರಡಿಸಿದ್ದಾರೆ. ಈ ತೀರ್ಪಿನಿಂದಾಗಿ ಐದು ವರ್ಷಗಳ ಅವಧಿಗೆ ರಾಜಕೀಯದಿಂದ ಅನರ್ಹಗೊಳಿಸಲಾಗುತ್ತದೆ. ಖಾನ್ ವಿಚಾರಣೆಗೆ ಹಾಜರಾಗಿರಲಿಲ್ಲ, ಹೀಗಾಗಿ ನ್ಯಾಯಾಧೀಶರು ಅವರನ್ನು ಬಂಧಿಸಲು ಆದೇಶಿಸಿದರು. ಆದರೆ, ತಕ್ಷಣವೇ ಮೇಲ್ಮನವಿ ಸಲ್ಲಿಸುವುದಾಗಿ ಅವರ ಕಾನೂನು ತಂಡ ಹೇಳಿದೆ.
ಟಿಟಿಪಿ ಮುಖ್ಯಸ್ಥ ಇಮ್ರಾನ್ ಖಾನ್ ದೇಶಾದ್ಯಂತ 140 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಭ್ರಷ್ಟಾಚಾರ ಮತ್ತು ಕೊಲೆಯಂತಹ ಆರೋಪಗಳನ್ನು ಎದುರಿಸುತ್ತಿದ್ದಾರೆ.