ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು.

ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು. ಸ್ವಾತಂತ್ರ್ಯವೇನೊ ಲಭಿಸಿತು. ಆದರೆ, ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೊಯ್ದರು. ಆದರೆ, ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿ:

“ಕತ್ತಿ ಪರದೇಶಿಯಾದರೆ ಮಾತ್ರ ನೋವೆ?
ನಮ್ಮವರೆ ಹದಹಾಕಿ ತಿವಿದರದು ಹೂವೆ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೆಲ್ಲ ಮನಗಂಡೆ ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆಂದು ತಿಳಿಸಿದರು.

ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.

Gandhi’s talisman ಎಂದು ಹೆಸರಾದ ಚಿಂತನೆಯ ನೆರಳಲ್ಲೇ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ.

ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ.

ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದೂವರೆಗೆ 38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಎರಡನೇ ಗ್ಯಾರಂಟಿ ಯೋಜನೆ, 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ. ಈ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್‍ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾವು ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸುತ್ತಿದ್ದೇವೆ.

ಹಸಿವು ಮುಕ್ತ ಕರ್ನಾಟಕದ ಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಗ್ಯಾರಂಟಿ ಯೋಜನೆ ‘ಅನ್ನ ಭಾಗ್ಯʼ. ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ.

ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.

ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಕೂಡಲೇ ಉದ್ಯೋಗ ದೊರೆಯದಿದ್ದರೆ, ನಿರಾಶರಾಗದಂತೆ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ, ಬೆಂಬಲ ನೀಡುವ ಯೋಜನೆ ಯುವನಿಧಿ. ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ.

ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.

ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ” ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ.

ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ.

ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.

ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು.

ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ.

ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿದ್ದೇವೆ.

ಹೈನುಗಾರಿಕೆಯನ್ನು ಉತ್ತೇಜಿಸಿ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿಗಳಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ರೈತರಿಗೆ ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಕ್ಷೇತ್ರದ ಬಲವರ್ಧನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.

ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಬಲ ಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಎಂಆರ್‍ಐ/ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಬಡ ರೋಗಿಗಳಿಗೆ ಉಚಿತ ಮತ್ತು ಉತ್ತಮ ಪರೀಕ್ಷೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಗಮಗೊಳಿಸಿ ಜನರ ಕೈಗೆಟುಕುವಂತೆ ಕ್ರಿಯಾಯೋಜನೆಗಳನ್ನು ರೂಪಿಸುತ್ತಿದ್ದೇವೆ.

“ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.

ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು.

ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ.

ಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆ. 2023ರ ಸೆಪ್ಟೆಂಬರ್‍ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ.

ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುವ ಸುಮಾರು 70 ರಿಂದ 80 ಲಕ್ಷ ಅಸಂಘಟಿತ ಅದರಲ್ಲೂ ವಿಶೇಷವಾಗಿ ಸಾರಿಗೆ ವಲಯದ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ.

38. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993 ಜಾರಿ ಹಾಗೂ ಸಂವಿಧಾನದ 73ನೇ ವಿಧಿಯ ತಿದ್ದುಪಡಿ ಮಾಡಿದ 30ನೇ ವರ್ಷದಲ್ಲಿ ನಾವಿದ್ದೇವೆ. ಪ್ರಜಾಪ್ರಭುತ್ವದ ವಿಕೇಂದ್ರೀಕರಣದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿದೆ. ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ಸ್ಥಳೀಯಾಡಳಿತ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.

ರಾಜ್ಯದ ಜನತೆಗೆ ಜೀವನೋಪಾಯವನ್ನು ಕಲ್ಪಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಕಾರ್ಯತಂತ್ರಗಳನ್ನು ನಮ್ಮ ಸರ್ಕಾರವು ಅಳವಡಿಸಿಕೊಳ್ಳಲಿದೆ. ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯ ತರಬೇತಿ, ಸಾಲ ಸೌಲಭ್ಯದ ಲಭ್ಯತೆ ಮತ್ತು ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಉದ್ಯಮಶೀಲತೆಗೆ ಪೆÇ್ರೀತ್ಸಾಹ ನೀಡಲಾಗುವುದು. ಹೊಸ ಉದ್ಯಮ ಸ್ಥಾಪನೆಯ ಪ್ರಕ್ರಿಯೆಗಳನ್ನು ಸರಳಗೊಳಿಸುವುದರೊಂದಿಗೆ ಪ್ರತಿ ತಾಲ್ಲೂಕಿನಲ್ಲಿ ಇದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಜನೆ ಮಾಡಲು ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಕೃಷಿ ಸಂಸ್ಕರಣೆ ಉದ್ಯಮಗಳ ಸ್ಥಾಪನೆಗೆ ಬೆಂಬಲ ನೀಡಲಾಗುವುದು. ಇದರಿಂದ ರೈತರ ಆದಾಯ ಹೆಚ್ಚುವುದಲ್ಲದೆ ಗ್ರಾಮೀಣ ಪ್ರದೇಶದ ಬೆಳವಣಿಗೆಗೆ ನೆರವಾಗಲಿದೆ.

ಕರ್ನಾಟಕವನ್ನು ಭವಿಷ್ಯದ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಉತ್ಪಾದನಾ ವಲಯದಲ್ಲಿ ಸಮಾನ ಹಾಗೂ ಸುಸ್ಥಿರ ಬೆಳವಣಿಗೆಯ ಮೂಲಕ ಏμÁ್ಯದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ ನಮ್ಮದಾಗಿದೆ. ಕಳೆದ 10 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ವಲಯವು ಶೇ. 9.3 ರ ದರದಲ್ಲಿ ಬೆಳವಣಿಗೆ ದಾಖಲಿಸಿದೆ. ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ದರವನ್ನು ಶೇ. 15-16 ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಪ್ರತಿವರ್ಷ ಕನಿಷ್ಠ 1.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 14 ಲಕ್ಷ ಹೊಸ ಉದ್ಯೋಗಗಳ ಸೃಜನೆಯಾಗುವ ಅಗತ್ಯವಿದೆ.

ಕಳೆದ ಎರಡು ತಿಂಗಳಲ್ಲಿ ಫಾಕ್ಸ್‍ಕಾನ್, ಇಂಟರ್‍ನ್ಯಾಷನಲ್ ಬ್ಯಾಟರಿ ಕಂಪೆನಿ, ಟಾಟಾ ಟೆಕ್ನಾಲಜೀಸ್ ಮತ್ತಿತರ ಕಂಪೆನಿಗಳಿಂದ ಗಣನೀಯ ಪ್ರಮಾಣದ ಹೂಡಿಕೆ ಆಕರ್ಷಿಸಲಾಗಿದೆ. ಹೂಡಿಕೆ ಆಕರ್ಷಣೆಯಲ್ಲಿ ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ ಏರೋಸ್ಪೇಸ್ ಮತ್ತು ರಕ್ಷಣೆ, ಆಟೊಮೊಬೈಲ್, ವಿದ್ಯುತ್ ವಾಹನಗಳು (EV), ಇಲೆಕ್ಟ್ರಾನಿಕ್ಸ್ ಮತ್ತು ಉತ್ಪಾದನಾ ವಲಯ, ಸ್ಟಾರ್ಟಪ್‍ಗಳು, ವಿವಿಧ ಸಂಘಟನೆಗಳು, ಮೂಲ ಸೌಕರ್ಯ ಅಭಿವೃದ್ಧಿ ವಲಯದ ಸಂಸ್ಥೆಗಳೊಂದಿಗೆ ನಿರಂತರ ಸಂವಾದ ನಡೆಸುತ್ತಿದ್ದೇವೆ.

ಜಿಡಿಪಿ ವೇಗವರ್ಧನೆಗೆ ಸಂಬಂಧಿಸಿದಂತೆ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ ಬಿಡಿಭಾಗಗಳು, ಕೋರ್ ಕೈಗಾರಿಕೆಗಳು ಮತ್ತು ವೇರ್ ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ನಾವೀನ್ಯತೆಯಲ್ಲಿ ಇದೀಗ ಬೆಳಕು ಕಾಣುತ್ತಿರುವ Future Mobility, Green Hydrogen, Drones, Industrial Robots, Semiconductors ಉತ್ಪಾದನೆ,AR/ VR, Med tech ಮತ್ತು Space tech ಮೊದಲಾದ ಉದ್ಯಮಗಳಿಗೆ ಆದ್ಯತೆ ನೀಡಲಾಗುವುದು.

ಆದ್ಯತೆಯ ಈ ವಲಯಗಳ ಉತ್ತೇಜನದ ಉಪಕ್ರಮಗಳಿಗೆ ಬೆಂಬಲವಾಗಿ ಕೈಗಾರಿಕಾ ನೀತಿಯನ್ನು ಇನ್ನಷ್ಟು ಪ್ರಗತಿಪರವಾಗಿ ರೂಪಿಸಿ ಪುನರ್ ರಚಿಸುವುದು, ವಿಶ್ವ ದರ್ಜೆಯ ಕೈಗಾರಿಕಾ ಮೂಲಸೌಕರ್ಯ, ಡಿಜಿಟಲ್ ಸೇವಾ ಪೂರೈಕೆ, ಅತ್ಯುತ್ತಮ ಹೂಡಿಕೆ ಉತ್ತೇಜನ ಸಂಸ್ಥೆ, ಕರ್ನಾಟಕದಲ್ಲಿ ಭವಿಷ್ಯದ ಉದ್ಯಮಕ್ಕೆ ಸಿದ್ಧವಿರುವ ಪ್ರತಿಭೆಗಳ ಲಭ್ಯತೆ ಮತ್ತು ವಿವಿಧ ಸಂಸ್ಥೆಗಳೊಂದಿಗೆ ಸಹಯೋಗ ಮತ್ತು ಮುಂಗಾಣ್ಕೆಯುಳ್ಳ ನೀತಿಗಳನ್ನು ಅನುಷ್ಠಾನಗೊಳಿಸಲಾಗುವುದು.

ಬೆಂಗಳೂರಿನಿಂದ ಹೊರಗೆ ಹೆಚ್ಚು ಉದ್ಯೋಗಾವಕಾಶ ಸೃಜಿಸುವ ಮೂಲಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮತ್ತು ಸುಸ್ಥಿರ ಬದುಕು ರೂಪಿಸಲು ಸರ್ಕಾರವು ಮಿಲಿಯನ್ ಪ್ಲಸ್ ನಗರಗಳೆಂದು ಗುರುತಿಸಲಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ನಗರಗಳ ಉಪನಗರಗಳಾಗಿ ಕೈಗಾರಿಕಾ ಟೌನ್‍ಶಿಪ್‍ಗಳÀನ್ನು ಅಭಿವೃದ್ಧಿಪಡಿಸಲಿದೆ. ಕೈಗಾರಿಕೆಗಳ ಸ್ಥಾಪನೆಯನ್ನು ಕೇಂದ್ರವಾಗಿಸಿಕೊಂಡ ಈ ಉಪನಗರಗಳು ಸುಸ್ಥಿರತೆಯನ್ನು ಹೊಂದಿದ್ದು, ನಾಗರಿಕ ಸೌಲಭ್ಯಗಳು, ಶಾಲೆ, ಆರೋಗ್ಯ ಸೇವಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸಲಾಗುವುದು.

ರಸ್ತೆ, ವಿಮಾನ ನಿಲ್ದಾಣ ಹಾಗೂ ಬಂದರುಗಳ ಅಭಿವೃದ್ಧಿಗೂ ಆಯವ್ಯಯದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ಪ್ರವಾಸಿ ತಾಣಗಳ ರಸ್ತೆಗಳನ್ನು ಗುರುತಿಸಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ Hybrid Annuity Model ನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು.

ಹುಮನಾಬಾದ್-ಕಲಬುರಗಿ ಮತ್ತು ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿ ನಡುವೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಎಕ್ಸಪ್ರೆಸ್-ವೇ ನಿರ್ಮಿಸುವ ಮೂಲಕ ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ನಡುವಣ ರಸ್ತೆ ಸಂಪರ್ಕ ಇನ್ನಷ್ಟು ಉತ್ತಮ ಪಡಿಸಲಾಗುವುದು.

ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಹಂಚಿಕೆ ಮಾಡಿರುವ ಪ್ರತಿ ಹನಿ ನೀರನ್ನು ಬಳಸಿಕೊಳ್ಳಲು ನಾವು ತಯಾರಿದ್ದೇವೆ. ಇದಕ್ಕೆ ಅಗತ್ಯವಿರುವ ಸಂಪನ್ಮೂಲ ಕ್ರೋಢೀಕರಿಸಿ ವಿನಿಯೋಗಿಸುತ್ತೇವೆ.

ನಮ್ಮ ಸರ್ಕಾರವು ಪ್ರಾದೇಶಿಕ ಅಸಮಾನತೆ ನಿವಾರಿಸಿ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ.

ಪ್ರವಾಸೋದ್ಯಮ ಕೂಡ ಆರ್ಥಿಕತೆ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಜನೆಗೆ ಮಹತ್ತರ ಕೊಡುಗೆ ನೀಡುತ್ತದೆ. ಈ ಹಿನ್ನೆಲೆಯಲ್ಲಿ ನಾಡಿನ ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಯನ್ನು ಕೈಗೊಳ್ಳಲು ಒತ್ತು ನೀಡಲಾಗುವುದು.

ಆಯವ್ಯಯದಲ್ಲಿ ಘೋಷಿದಂತೆ ಕೃಷಿಯೇತರ ಉದ್ದೇಶಕ್ಕೆ ಜಮೀನಿನ ಬಳಕೆಗೆ ಸ್ವಯಂ ಘೋಷಣೆಯ ಮೂಲಕ ಭೂ-ಪರಿವರ್ತನೆ ಮಾಡಲು ಅನುಕೂಲವಾಗುವಂತೆ ಕರ್ನಾಟಕ ಭೂ-ಕಂದಾಯ ಕಾಯ್ದೆಯ ಸೆಕ್ಷನ್-95ಕ್ಕೆ ತಿದ್ದುಪಡಿ ತಂದು ಪ್ರಕ್ರಿಯೆಗಳನ್ನು ಸರಳೀಕರಣ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡುವ, ಸಾಮರಸ್ಯ ಕದಡುವ ಯತ್ನ ಮತ್ತು ‘ಮತೀಯ ಗೂಂಡಾಗಿರಿ ಅಥವಾ ನೈತಿಕ ಪೊಲೀಸ್ ಗಿರಿʼ ಹೆಸರಿನಲ್ಲಿ ನಡೆಯುವ ಅನೈತಿಕ ದಬ್ಬಾಳಿಕೆಯನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಸರ್ಕಾರದ ಪ್ರಧಾನ ಧ್ಯೇಯ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯವನ್ನು ಈಡೇರಿಸುವುದೇ ಆಗಿದೆ. ನಾಡ ಜನರು, ವಿಶೇಷವಾಗಿ ಯುವಜನರು ಇಂತಹ ವಿಚ್ಛಿದ್ರಕಾರಿ ಶಕ್ತಿಗಳ ಪ್ರಚೋದನೆಗೆ ಒಳಗಾಗದೆ ಸಾಮರಸ್ಯ, ಸಹಬಾಳ್ವೆಯ ಮಹತ್ವವನ್ನು ಎತ್ತಿ ಹಿಡಿಯಬೇಕೆಂದು ಮನವಿ ಮಾಡುತ್ತೇನೆ.

55. ನಮ್ಮ ಸರ್ಕಾರವು ಯುವ ಶಕ್ತಿಯನ್ನು ರಾಜ್ಯದ ಸಂಪತ್ತು ಎಂದು ಭಾವಿಸಿದೆ. ನಿರುದ್ಯೋಗ ನಿವಾರಣೆಗೆ ನಾವು ಸ್ಪಷ್ಟ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತೇವೆ. ಇದರ ಜೊತೆಗೆ ರಾಜ್ಯ ಸರ್ಕಾರವು ಡ್ರಗ್ಸ್ ಪಿಡುಗನ್ನು ನಿಯಂತ್ರಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಈಗಾಗಲೇ ಕ್ರಮ ಕೈಗೊಂಡಿದೆ. ಜೊತೆಗೆ ಡ್ರಗ್ಸ್ ಎಂಬ ಮಹಾಮಾರಿಯ ವಿರುದ್ಧ ಜನಜಾಗೃತಿಯನ್ನೂ ಹಾಗೂ ಯುವಜನರೊಂದಿಗೆ ಸಂವಾದಗಳನ್ನೂ ನಾವು ಏರ್ಪಡಿಸುತ್ತೇವೆ.

ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಉದ್ದೇಶದಿಂದ ದಿವಂಗತ ರಾಜೀವ್ ಗಾಂಧಿಯವರು ಸಂವಹನ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದರು. ತಂತ್ರಜ್ಞಾನದ ಅಸೀಮ ಸಾಧ್ಯತೆಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್‍ರವರ ನೇತೃತ್ವದ ಯುಪಿಎ ಸರ್ಕಾರ “ಆಧಾರ್” ವ್ಯವಸ್ಥೆಯನ್ನು ಜಾರಿಗೆ ತಂದಿತು. “ಆಧಾರ್” ಬಂದ ನಂತರ ಫಲಾನುಭವಿಗಳಿಗೆ ಸವಲತ್ತನ್ನು ನೇರವಾಗಿ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಯಿತು. ಈಗ ನಾವು ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಇದೇ ವ್ಯವಸ್ಥೆಯನ್ನೇ ಬಳಸುತ್ತಿದ್ದೇವೆ. ವರ್ಷಕ್ಕೆ 50 ಸಾವಿರ ಕೋಟಿಗೂ ಹೆಚ್ಚಿನ ಮೊತ್ತವನ್ನು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ನಯಾಪೈಸೆಯಷ್ಟು ಭ್ರಷ್ಟಾಚಾರದ ಸೋಂಕು ಇಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ.

ಭ್ರಷ್ಟಾಚಾರವು ಸಾಂಸ್ಥೀಕರಣಗೊಳ್ಳುವ ಮಟ್ಟಿಗೆ ಬೆಳೆದಿದೆ. ಇದನ್ನು ಹಂತ ಹಂತವಾಗಿ ನಿವಾರಿಸುವ ಕೆಲಸ ಮಾಡಲು ಪಣತೊಟ್ಟಿದ್ದೇವೆ. ಈಗಾಗಲೆ ಸರ್ಕಾರವು ಭ್ರಷ್ಟಾಚಾರವನ್ನು ನಿವಾರಿಸಲು ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿಂದೆ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಆದೇಶಗಳನ್ನು ಹೊರಡಿಸಿದೆ. ತಪ್ಪಿತಸ್ಥರ ವಿರುದ್ಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ದೃಢ ನಿಲುವು ತಾಳಿದೆ.

ಇಂದು ನಾವು ವಿಲಕ್ಷಣವಾದ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ. ಒಂದೆಡೆ ವಿಜ್ಞಾನ ಮತ್ತು ತಂತ್ರಜ್ಞಾನಗಳು ಮನುಷ್ಯನ ಬದುಕನ್ನು ಹಸನುಗೊಳಿಸುವ ಹೊಸ ಅವಕಾಶಗಳನ್ನು ಮತ್ತು ಸಾಧ್ಯತೆಗಳನ್ನು ತೆರೆಯುತ್ತಿವೆ. ಸಂವಹನ ತಂತ್ರಜ್ಞಾನವು ಜಗತ್ತನ್ನು ಪ್ರತಿದಿನವೂ ಕಿರಿದಾಗಿಸುತ್ತಿದೆ. ಆದರೆ ಇದರಿಂದ ಮನುಷ್ಯನ ಸ್ವಾರ್ಥ ಮತ್ತು ಕ್ರೌರ್ಯಗಳು ತೀವ್ರಗೊಳ್ಳುತ್ತಿವೆ. ಆಧುನಿಕ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆಯು ಮನುಷ್ಯರ ಘನತೆಯನ್ನು ಕುಗ್ಗಿಸದಂತೆ, ಅವರ ಉದ್ಯೋಗಾವಕಾಶಗಳನ್ನು ಕಿತ್ತುಕೊಳ್ಳದಂತೆ ಮಾಡಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ನಾವು ಕಾರ್ಯಯೋಜನೆಯನ್ನು ರೂಪಿಸುತ್ತಿದ್ದೇವೆ.

ಕಳೆದ ಕೆಲವು ವರ್ಷಗಳಿಂದೀಚೆಗೆ ದೇಶವು ವಿಪರೀತ ಆತಂಕಿತಗೊಂಡಿದೆ. ಸಮಾಜಗಳಲ್ಲಿ ವಿನಾಕಾರಣ ದ್ವೇಷ, ಹಿಂಸೆ, ಗುಮಾನಿ, ಶತ್ರುತ್ವ ಭಾವ, ಅಸಹನೆಗಳು ಬೆಳೆಯುತ್ತಿವೆ. ಕೆಟ್ಟದ್ದನ್ನು ಉತ್ಪಾದಿಸಿ ಅದಕ್ಕೆ ಎಲ್ಲರ ಒಪ್ಪಿಗೆ ಇದೆ ಎಂಬ ಭಾವನೆಯನ್ನು ಸೃಷ್ಟಿಸಲು ಸಮಾಜದ ಕೆಲವು ವರ್ಗಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಈ ರೀತಿಯ ನಕಾರಾತ್ಮಕ ಧೋರಣೆಯನ್ನು ನಾವು ಹಿಮ್ಮಟ್ಟಿಸಲೇಬೇಕು. ಶಾಂತಿ ಸುವ್ಯವಸ್ಥೆಗಳಿದ್ದರೆ ಸಮಾಜವು ಅಭಿವೃದ್ಧಿಯತ್ತ ಸಾಗುತ್ತದೆ. ಹಿಂಸೆ, ಗೊಂದಲಗಳು ಇರುವ ಸಮಾಜಗಳು, ಕಾನೂನು ಸುವ್ಯವಸ್ಥೆ ಕುಸಿದು ಬಿದ್ದ ವ್ಯವಸ್ಥೆಗಳಲ್ಲಿ ಬಡತನ ಹೆಚ್ಚುತ್ತದೆ. ಪ್ರತಿ ವರ್ಷ ಲಕ್ಷಾಂತರ ಪ್ರತಿಭಾವಂತರು ನಮ್ಮ ಹೆಮ್ಮೆಯ ದೇಶದ ನಾಗರಿಕತ್ವವನ್ನು ತೊರೆದು ಹೋಗುತ್ತಿದ್ದಾರೆ. ನಮ್ಮ ವಿಶ್ವವಿದ್ಯಾಲಯಗಳು ಅಪ್ರತಿಮ ಪ್ರತಿಭಾವಂತರನ್ನು, ವೈಜ್ಞಾನಿಕ, ವೈಚಾರಿಕ ಸ್ಫೂರ್ತಿಯುಳ್ಳ ಜ್ಞಾನಿಗಳನ್ನು ಸೃಷ್ಟಿಸಬೇಕಾದ ಅನಿವಾರ್ಯತೆ ಇದೆ.

ನಾಡಿನ ನೆಲ, ಜಲ, ಭಾಷೆ ಹಾಗೂ ಅಸ್ಮಿತೆಯನ್ನು ಕಾಪಾಡಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಹಾಗೆಯೇ ಮಹಾನ್ ಮಾನವತಾವಾದಿಗಳಾದ ಬುದ್ಧ, ಗಾಂಧೀಜಿ, ಬಸವಣ್ಣ, ಅಂಬೇಡ್ಕರ್, ಕುವೆಂಪು ಮೊದಲಾದವರು ಪ್ರತಿಪಾದಿಸಿದ ಮಾನವೀಯತೆಯ ತಳಹದಿಯ ಅಭಿವೃದ್ಧಿಯ ಮಾದರಿಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದನ್ನು ‘ಕರ್ನಾಟಕ ಮಾದರಿ ಅಭಿವೃದ್ಧಿʼ ಎಂದು ಕರೆಯಲಾಗುತ್ತದೆ.

ಆಧುನಿಕ ಭಾರತದ ನಿರ್ಮಾತೃ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯದ ಮುನ್ನಾ ದಿನ ಆಗಸ್ಟ್ 14, 1947 ರಂದು ಮಾಡಿರುವ ಅತ್ಯಂತ ಜನಪ್ರಿಯ ಭಾಷಣ “Tryst with destiny” ಎಂದೇ ಹೆಸರಾಗಿದೆ. ಇದರಲ್ಲಿ ನೆಹರು ಅವರು, “ಭವಿಷ್ಯ ಸುಲಭವಲ್ಲ ಅಥವಾ ನಿರಾಳವೂ ಅಲ್ಲ; ಬದಲಿಗೆ ನಾವು ಈ ವರೆಗೆ ಕೈಗೊಂಡಿರುವ ಹಾಗೂ ಇಂದು ಕೈಗೊಳ್ಳುವ ಪ್ರತಿಜ್ಞೆಗಳನ್ನು ಈಡೇರಿಸುವ ನಿರಂತರ ಪ್ರಯತ್ನಗಳನ್ನೊಳಗೊಳ್ಳುವುದು. ಭಾರತದ ಸೇವೆಯೆಂದರೆ ನೋವನುಭವಿಸುತ್ತಿರುವ ಲಕ್ಷಾಂತರ ಜನರ ಸೇವೆ ಮಾಡುವುದು. ಬಡತನ, ಮೂಢನಂಬಿಕೆ, ರೋಗರುಜಿನಗಳು ಹಾಗೂ ಅವಕಾಶಗಳಲ್ಲಿನ ಅಸಮಾನತೆಯನ್ನು ನಿವಾರಿಸುವುದು.” ಎಂದಿದ್ದಾರೆ. ನಾವು ನೆಹರೂ ಅವರ ಆಶಯಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ. ಸುಮಾರು 4 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ, ಸುಂಕ, ಮೇಲ್ತೆರಿಗೆಗಳನ್ನು ಕೇಂದ್ರಕ್ಕೆ ಪಾವತಿಸುತ್ತಿದೆ. ಅದರೆ ನಮಗೆ ವಾಪಸ್ಸು ಬರುತ್ತಿರುವುದು 50 ಸಾವಿರ ಕೋಟಿ ರೂ. ಮಾತ್ರ. ನಮಗೆ ನ್ಯಾಯಯುತವಾಗಿ ಬರಬೇಕಾದಷ್ಟು ಸಂಪನ್ಮೂಲಗಳು ಕೇಂದ್ರದಿಂದ ಮರಳಿ ಬಂದರೆ ರಾಜ್ಯವು ಅತ್ಯಂತ ಶ್ರೀಮಂತ ರಾಜ್ಯವಾಗುವುದು. ಇಷ್ಟರ ನಡುವೆಯೂ ನಾವು ಆರ್ಥಿಕ ಶಿಸ್ತನ್ನು ಸರಿಯಾಗಿ ಪಾಲಿಸುತ್ತಿದ್ದೇವೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ನೈಜ ದೇಶಪ್ರೇಮಿಗಳಿಗೆ ಇದು ಅರ್ಥವಾಗುತ್ತದೆ.

ಕರ್ನಾಟಕದ ಜನರು ಒಡೆದಾಳುವವರ ವಿರುದ್ಧ ನಿಂತಿದ್ದಾರೆ. ಇವನಾರವನೆನ್ನದೆ ಒಳಗೊಂಡು ಆಡಳಿತ ಮಾಡುವ ನಮ್ಮನ್ನು ಆರಿಸಿದ್ದಾರೆ. ಈ ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆಯಲ್ಲಿ ಬಹಳ ಮುಖ್ಯವಾದುದು ಈ ಒಳಗೊಂಡು ಬಾಳುವ, ಎಲ್ಲರ ಅಭಿವೃದ್ಧಿಯನ್ನು ಬಯಸುವ ಕರ್ನಾಟಕದ ಹೊಸ ಮಾದರಿಗಳನ್ನು ಪ್ರಬಲಗೊಳಿಸುವ ಭರವಸೆಯೇ ಆಗಿದೆ.

ಪಂಡಿತ್ ನೆಹರೂ ಅವರು ಹೇಳಿದಂತೆ ಎಲ್ಲರೂ ಒಟ್ಟುಗೂಡಿ ದುಡಿಯೋಣ, ರಾಜ್ಯದ ಅಭಿವೃದ್ಧಿಯ ಹೊಸ ಮನ್ವಂತರವನ್ನು ಪ್ರಾರಂಭಿಸೋಣ. ನಮ್ಮ ನಾಡಿನಲ್ಲಿ ಶಾಂತಿ, ಸೌಹಾರ್ದ, ಸಮೃದ್ಧಿಗಳು ನೆಲೆಸಲಿ.

ಬಲಿಷ್ಠವಾಗಿ ನಿಂತಿರುವ ನಮ್ಮ ದೇಶದ ಸೈನ್ಯ, ದೇಶದ ಸಂಪತ್ತನ್ನು ಹೆಚ್ಚಿಸುತ್ತಿರುವ ಯುವಜನತೆ ಮತ್ತು ದೇಶವು ಹಸಿವಿನಿಂದ ಕಂಗೆಡದಂತೆ ನಿರಂತರ ಅನ್ನ ಉತ್ಪಾದಿಸುತ್ತಿರುವ ಅನ್ನಬ್ರಹ್ಮನೆಂದು ಕರೆಯಲಾಗುವ ರೈತರನ್ನು ಸ್ಮರಿಸೋಣ. ಕಾರ್ಮಿಕರು, ವಿಜ್ಞಾನಿಗಳು, ತಂತ್ರಜ್ಞಾನಿಗಳು… ಮುಂತಾದವರನ್ನು ಹುರಿದುಂಬಿಸೋಣ. ಶ್ರದ್ಧೆಯಿಂದ ದುಡಿದು ಸುಭದ್ರ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಸುಭದ್ರ ಕರ್ನಾಟಕ ಹಾಗೂ ಸುಭದ್ರ ಭಾರತವನ್ನು ನಿರ್ಮಿಸೋಣ.

ಇದು ಎಲ್ಲರ ಭಾರತ. ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ. ಇದನ್ನು ಪ್ರತಿ ಕ್ಷಣವೂ ನೆನಪಿಸಿಕೊಳ್ಳೋಣ. ಅಂತಿಮವಾಗಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಪಂಪನ ಮಾತುಗಳು ಸಮಸ್ತ ಜನಕೋಟಿಯ ಘೋಷ ವಾಕ್ಯವಾಗಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹೇಳಿದರು.

kiniudupi@rediffmail.com

No Comments

Leave A Comment