
ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ.
ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.