ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಸದಾನಂದಗೌಡ: 2024ರ ಲೋಕಸಭೆ ಚುನಾವಣೆಯಲ್ಲಿ ಡಿವಿಎಸ್ ಗಿಲ್ಲ ಟಿಕೆಟ್!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, 2024 ರ ಲೋಕಸಭೆ ಚುನಾವಣೆ ಸಂಬಂಧ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದವು ಎಂದು ಮೂಲಗಳು ತಿಳಿಸಿವೆ.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಹೇಳಿಕೆ ನೀಡಿದ ನಂತರ ಬಿಜೆಪಿ ಹೈಕಮಾಂಡ್ ಅವರನ್ನು ಕರೆಸಿದ್ದರಿಂದ ಗೌಡ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿದ್ದರು. ರಾಜ್ಯದ ಬಹುತೇಕ ಬಿಜೆಪಿ ನಾಯಕರು ಮೈತ್ರಿಗೆ ವಿರುದ್ಧವಾಗಿದ್ದಾರೆ ಎಂದು ಇತ್ತೀಚೆಗೆ ಸದಾನಂದಗೌಡ ಹೇಳಿಕೆ ನೀಡಿದ್ದರು.
ಮೈತ್ರಿ ಬಗ್ಗೆ ಹೈಕಮಾಂಡ್ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಅವರು ತಲೆ ಕೆಡಿಸಿಕೊಂಡಿದ್ದರು ಎನ್ನಲಾಗಿದೆ. ಬೆಂಗಳೂರು ಉತ್ತರ ಸಂಸದ ಸದಾನಂದಗೌಡರಿಗೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ನವೆಂಬರ್ ಮೊದಲ ವಾರದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೈತ್ರಿ ಒಪ್ಪಂದಕ್ಕೆ ಮುದ್ರೆ ಹಾಕುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಜೆಡಿಎಸ್ 28ರಲ್ಲಿ ನಾಲ್ಕರಿಂದ ಐದು ಸ್ಥಾನಗಳನ್ನು ಬಯಸುತ್ತಿದೆ.