ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಆಶೀರ್ವಾದ ಪಡೆದುಕೊಂಡರು.

ಮೊದಲಿಗೆ ವಿಜಯೇಂದ್ರ ಅವರು ನಗರದ ಆರ್’ಟಿ ನಗರದಲ್ಲಿರುವ ಬೊಮ್ಮಾಯಿಯವರ ನಿವಾಸಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡೆ. ಇದೇ ತಿಂಗಳ 15ರಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತೇನೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಗುರುವಾರ ಅಥವಾ ಶುಕ್ರವಾರ ಬಿಜೆಪಿ ಶಾಸಕರ ಅಭಿಪ್ರಾಯ ಪಡೆದು,ಇದೇ ತಿಂಗಳ 23ರಂದು ದೆಹಲಿಗೆ ತೆರಳಿ ಚರ್ಚೆ ನಡೆಸುತ್ತೇನೆಂದು ಹೇಳಿದರು.

ಬೊಮ್ಮಾಯಿ ಭೇಟಿ ಬೆನ್ನಲ್ಲೇ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್’ಡಿ ದೇವೇಗೌಡ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ದೇವೇಗೌಡರನ್ನು ಇವತ್ತು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ್ದೇನೆ. ಅವರ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.

ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ತಂದೆಯವರಾದ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನೀನು ಕೂಡ ಯಶಸ್ವಿ ಆಗುವಂತೆ ಹರಸಿದ್ದಾಗಿ ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ, ಸಮಸ್ಯೆಗಳಿದ್ದರೆ ಬಗೆಹರಿಸಿಕೊಂಡು, ಯಾವುದೇ ಗೊಂದಲಕ್ಕೆ ಅವಕಾಶ ಮಾಡಿ ಕೊಡದೆ ಹೆಚ್ಚು ಸ್ಥಾನವನ್ನು ಗೆಲ್ಲಬೇಕು. ಇದು ದೇಶದ ಭವಿಷ್ಯ ನಿರ್ಮಾಣದ ಚುನಾವಣೆ. ಯುವಕರು ಹೆಚ್ಚು ಹೆಚ್ಚಾಗಿ ಮುಂದೆ ಬರಬೇಕೆಂದು ಆಶೀರ್ವಾದ ಮಾಡಿದ್ದಾರೆ.

ದೇವೇಗೌಡರ ಭೇಟಿಯಿಂದ ತುಂಬಾ ಸಂತೋಷವಾಗಿದೆ. ರಾಜ್ಯದ ಮತ್ತು ದೇಶದ ಆಗುಹೋಗುಗಳ ಬಗ್ಗೆ ಅವರ ಚಿಂತನೆಗಳು ಪ್ರೇರಕ ಮತ್ತು ದೊಡ್ಡ ಶಕ್ತಿಯನ್ನು ಕೊಡುತ್ತದೆ ಎಂದು ವಿಶ್ಲೇಷಿಸಿದರು. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಮತ್ತು ಯಡಿಯೂರಪ್ಪ ಅವರ ನೆನಪಾಗುತ್ತದೆ. ಅದನ್ನು ಕೂಡ ಅವರು ನೆನಪು ಮಾಡಿಕೊಂಡರು.

ಇದೇ ವೇಳೆ ಪಕ್ಷದ ಹಿತದೃಷ್ಟಿಯಿಂದ ದೇವೇಗೌಡರ ಸಲಹೆ, ಕುಮಾರಸ್ವಾಮಿ ಅವರ ಸಲಹೆಗಳನ್ನು ತೆಗೆದುಕೊಳ್ಳುತ್ತೇವೆಂದು ಹೇಳಿದರು.

ಶುಕ್ರವಾರ ಬಿವೈ ವಿಜಯೇಂದ್ರ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಎಂದು ಹೈಕಮಾಂಡ್ ಘೋಷಿಸಿ ಆದೇಶಿಸಿತು. ಕೇಂದ್ರದ ವರಿಷ್ಠರ ಈ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರರ ಆಯ್ಕೆ ನಿರ್ಧಾರವು ರಾಜ್ಯ ಬಿಜೆಪಿ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರ ಜತೆ ಗುರುತಿಸಿಕೊಂಡ ಒಂದಷ್ಟು ನಾಯಕರು ಮಾತ್ರ ನೂತನ ರಾಜ್ಯಾಧ್ಯಕ್ಷರಿಗೆ ಶುಭಕೋರಿದ್ದಾರೆ. ಇದು ಉಳಿದವರಲ್ಲಿ ಉಂಟಾದ ಅಸಮಾಧಾನವನ್ನು ಎತ್ತಿ ತೋರಿಸಿದೆ.

ಸದ್ಯ ರಾಜ್ಯಾಧ್ಯಕ್ಷರಾದ ಬಳಿಕ ಇದೇ ನವೆಂಬರ್ 15ರಂದು ಬುಧವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಹಿರಿಯ ಸಮ್ಮುಖದಲ್ಲಿ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

No Comments

Leave A Comment