ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!
ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆ ಆಗಿವೆ.
ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ.
ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಇದೀಗ ಶಂಕಿಸಲಾಗಿದೆ.
ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ ಹಾಗೂ ಮಗಳು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
ಜಗನ್ನಾಥ ರೆಡ್ಡಿಯವರ ಪತ್ನಿ ಅಸ್ವಸ್ಥರಾಗಿದ್ದು , 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿರಲಿಲ್ಲ. ಈ ಮನೆಯವರು ಯಾರನ್ನೂ ಒಳಬಿಟ್ಟುಕೊಳ್ಳುತ್ತಿರಲಿಲ್ಲ. ಬಾಗಿಲು ತೆರೆಯದೇ ಕಿಟಕಿಯಿಂದ ಮಾತಾಡಿಸಿ ಕಳುಹಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೂಡ ಕಂಡುಬಂದಿದೆ. ಆದರೆ ಈ ಪ್ರಕರಣ ಹೆಚ್ಚಿನ ಕುತೂಹಲ ಗರಿಗೆದರಿಸುವಂತಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು ಯಾರದು? ಎಲ್ಲರೂ ಏಕಕಾಲಕ್ಕೆ ಸತ್ತರೇ? ಸಾವಿಗೆ ಆತ್ಮಹತ್ಯೆ ಕಾರಣವೇ? ಸಾವಿಗೆ ಕಾಯಿಲೆ ಅಥವಾ ಅನ್ಯ ಕಾರಣಗಳಿದ್ದಿರಬಹುದೇ? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬ ಪ್ರಶ್ನೆಗಳು ಮೂಡತೊಡಗಿದ್ದು, ಈ ಕುರಿತು ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ನಡುವೆ ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಪೊಲೀಸರು, ಎಎಸ್‌ಪಿ ಎಸ್.ಜೆ. ಕುಮಾರಸ್ವಾಮಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ವಿಧಿ ವಿಜ್ಞಾನ ತಂಡ ಕೂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿವೆ.