ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಜಯಲಲಿತಾರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ: ವಿಶೇಷ ನ್ಯಾಯಾಲಯ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಚ್‌ ಎ ಮೋಹನ್‌ ಅವರು ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್‌ ಇಲಾಖೆಗೆ ಆದೇಶಿಸಿದ್ದಾರೆ. ವಸ್ತುಗಳನ್ನು ಪರಿಶೀಲಿಸಿ ಪಡೆಯಲು ಕಾರ್ಯದರ್ಶಿ ಮಟ್ಟದಲ್ಲಿ ಸೂಕ್ತ ವ್ಯಕ್ತಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಗೆ ನ್ಯಾಯಾಲಯ ನಿರ್ದೇಶಿಸಿದ್ದು, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ಐದು ಕೋಟಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯ ಈ ಮೂಲಕ ನಿರ್ದೇಶಿಸಿದೆ.

ರಾಜ್ಯ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವ ಕಿರಣ್ ಎಸ್. ಜವಳಿ ಅವರು ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್‌ 27ರಂದು ಆದೇಶಿಸಿತ್ತು. ಜೊತೆಗೆ ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಇದರಿಂದ ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಏನೆಲ್ಲಾ ವಸ್ತುಗಳಿವೆ?
7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ ವಿ ಸೆಟ್ , 8 ವಿಸಿಆರ್, 1 ವಿಡಿಯೊ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ ರೇಕಾರ್ಡರ್, 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

No Comments

Leave A Comment