ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದೆ ರೀಟಾ ಬಹುಗುಣಗೆ 6 ತಿಂಗಳ ಜೈಲು ಶಿಕ್ಷೆ
ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಶುಕ್ರವಾರ ಲಕ್ನೋ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು 1,100 ರೂಪಾಯಿ ದಂಡ ವಿಧಿಸಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ (MP-MLA ಕೋರ್ಟ್) ವಿಶೇಷ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (MP-MLA ಕೋರ್ಟ್) ಅಂಬರೀಶ್ ಕುಮಾರ್ ಶ್ರೀವಾಸ್ತವ ಅವರು ಈ ಆದೇಶ ನೀಡಿದ್ದಾರೆ.
ಕಾಂಗ್ರೆಸ್ ಪರ ಸಭೆ ನಡೆಸಿದ್ದ ರೀಟಾ ಬಹುಗುಣ
ಅಂದಹಾಗೆ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಸಂಸದೆ ಕಾಂಗ್ರೆಸ್ ಪಕ್ಷದ ಪರವಾಗಿ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದರು ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಪ್ರಯಾಗ್‌ರಾಜ್‌ನ ಹಾಲಿ ಬಿಜೆಪಿ ಸಂಸದೃರಾಗಿರುವ ರೀಟಾ ಬಹುಗುಣ ಜೋಶಿ ಅವರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ.
ಫೆಬ್ರವರಿ 17, 2012 ರಂದು ಸಂಜೆ 6.50 ರ ಸುಮಾರಿಗೆ ಲಕ್ನೋನ ಕ್ಯಾಂಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೋಶಿ ಅವರು ಕೃಷ್ಣನಗರದ ಬಜರಂಗನಗರ ಪ್ರದೇಶದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ನಡೆಸುತ್ತಿದ್ದರು ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಚಾರದ ಸಮಯ ಮುಗಿದ ನಂತರವೂ ರೀಟಾ ಬಹುಗುಣ ಜೋಶಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.