ಬಾಗಲಕೋಟೆ: ಮಠಾಧಿಪತಿ ವಿವಾದ ; ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ!
ಬಾಗಲಕೋಟೆ: ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು, ಅವರ ಕಾರಿಗೆ ಚಪ್ಪಲಿ ಎಸೆದಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿಯಲ್ಲಿ ಈ ಘಟನೆ ನಡೆದಿದೆ.
ಉದಗಟ್ಟಿ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶ್ರೀಗಳ ಕಾರನ್ನು ಅಡಗಟ್ಟಿದ್ದ ಭಕ್ತರು, ವಿವಾದ ಕೋರ್ಟ್‌ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ, ಹೊಲದ ಉಳುಮೆ ಮಾಡಿದ್ದಕ್ಕೆ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.
ಧರ್ಮ ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತದೆ: ರಂಭಾಪುರಿ ಶ್ರೀ
ಕಲಾದಗಿಯ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಮ್.ಗಂಗಾಧರ ಸ್ವಾಮೀಜಿಯನ್ನ ನೇಮಕ ಮಾಡಿದ್ದರು. ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಗ್ರಾಮಸ್ಥರು ಆರೋಪಿಸಿದ್ದರು.