ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು: 3 ಸಿಬ್ಬಂದಿಗಳ ವಜಾ
ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಮಂಗಳವಾರ ಆದೇಶಿಸಲಾಗಿದೆ. ಮೂಲಗಳ ಪ್ರಕಾರ ನ್ಯಾಷನ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ತಜ್ಞರು ಹಾಗೂ ಸ್ತ್ರೀರೋಗ ತಜ್ಞರಾದ ಡಾ.ಪೂಜ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ತಜ್ಞ ಸಿಬ್ಬಂದಿ ಬಿ.ಆರ್.ಕಿರಣ್ ಅವರನ್ನು ವಜಾ ಮಾಡಲಾಗಿದೆ. ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಸೋಂಕು ಹರಡಿ ಮಹಿಳೆಯರು ಸಾವನ್ನಪ್ಪಿರುವುದು ಮೇಲು ನೋಟಕ್ಕೆ ಕಂಡು ಬಂದಿದೆ. ಶಸ್ತ್ರ ಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಈ ವರದಿ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಏನಿದು ಘಟನೆ?
ಕಳೆದ ಫೆಬ್ರವರಿ 22ರಂದು ಏಳು ಮಹಿಳೆಯರು ಗರ್ಭಕೋಶದ ಚಿಕಿತ್ಸೆ, ಸಂತಾನಹರಣ ಮತ್ತು ಸಿಸೇರಿಯನ್ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪೈಕಿ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದರು. ಇದೀಗ ಈ ಪ್ರಕರಣ ಸಂಬಂಧ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.