ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ: ಯದುವೀರ್, ಸೌಮ್ಯ ರೆಡ್ಡಿ, ಸುಧಾಕರ್ ಸೇರಿ ಹಲವು ಅಭ್ಯರ್ಥಿಗಳಿಂದ ಉಮೇದುವಾರಿಕೆ
ಬೆಂಗಳೂರು: ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಿಸಿ ಮೋಹನ್ ಅವರು ಇಂದು ನಾಮ ಪತ್ರ ಸಲ್ಲಿಕೆ ಮಾಡಿದರು. ಬಿಬಿಎಂಪಿ ಕಚೇರಿಗೆ ಆಗಮಿಸಿದ ಪಿಸಿ ಮೋಹನ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಬೆಂಗಳೂರು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಸೌಮ್ಯರೆಡ್ಡಿ, ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ವಿ ಸೋಮಣ್ಣ ಮತ್ತು ಕೆ ಸುಧಾಕರ್ ಅವರು ಕ್ರಮವಾಗಿ ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್‌ನಿಂದ ಸುಧಾಕರ್ ಅವರ ಎದುರಾಳಿ ರಕ್ಷಾ ರಾಮಯ್ಯ ಕೂಡ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು. ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (‘ಸ್ಟಾರ್’ ಚಂದ್ರು) ಮತ್ತು ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಹುತೇಕ ಎಲ್ಲ ಅಭ್ಯರ್ಥಿಗಳು ದೇವಸ್ಥಾನಗಳಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿದರು.
28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ.