ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಹಿರಿಯ ಜಾನಪದ ತಜ್ಞ ಎಂಜಿ ಈಶ್ವರಪ್ಪ ನಿಧನ
ದಾವಣಗೆರೆ, ಜೂನ್.02: ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ (ಜೂ.01) ಸಂಜೆ ನಿಧನರಾದರು. ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂನ್ 2ರಂದು ಭಾನುವಾರ ಮಧ್ಯಾಹ್ನ 2ಕ್ಕೆ ದಾವಣಗೆರೆಯ ಶಾಮನೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಂ.ಜಿ. ಈಶ್ವರಪ್ಪ ಅವರು ರಂಗಭೂಮಿ, ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಮಧ್ಯ ಕರ್ನಾಟಕ ಭಾಗದಲ್ಲಿ ‘ಮೇಷ್ಟ್ರು’ ಎಂದೇ ಹೆಸರಾಗಿದ್ದರು. 38 ವರ್ಷ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ತಮ್ಮ ಅನುಭವವನ್ನು ಧಾರೆ ಎರೆದಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಕರ್ನಾಟಕ ಸರ್ಕಾರ ಅವರಿಗೆ 2020ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.
1950ರಲ್ಲಿ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಈಶ್ವರಪ್ಪ, ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಪಡೆದು ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವಿ ಗಳಿಸಿದ್ದರು. 1987ರಿಂದ 90ರವರೆಗೆ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರಲ್ಲದೆ, 2003ರಿಂದ 2006ರವರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ 2007ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದರು.
ಆರಂಭದಲ್ಲಿ ಡಿ.ಆರ್.ಎಂ ಕಾಲೇಜು ಆನಂತರ ಎಂ.ಎಸ್.ಬಿ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಬಳಿಕ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ನಾಟಕ ಅಕಾಡೆಮಿಯ ಗೌರವ ಫೆಲೋಶಿಪ್, ಕರ್ನಾಟಕ ಜಾನಪದ ಅಕಾಡೆಮಿಯ ‘ತಜ್ಞ ಪ್ರಶಸ್ತಿ’, ಕು.ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ, ದಾವಣಗೆರೆ ಜಿಲ್ಲೆಯ ‘ಮಹಲಿಂಗರಂಗ’ ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘದ ‘ಶಿವಕುಮಾರ ರಂಗ ಪ್ರಶಸ್ತಿ’ಗಳು ಇವರಿಗೆ ಲಭಿಸಿವೆ. ಎಂಜಿ ಈಶ್ವರಪ್ಪ ನಿಧನಕ್ಕೆ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಕಂಬನಿ ಮಿಡಿದಿದ್ದಾರೆ.