ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರೇಣುಕಾಸ್ವಾಮಿ ಕೊಲೆ ಕೇಸ್: 17 ಆರೋಪಿಗಳ ಬಂಧನ, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಬಹಿರಂಗ- ಪೊಲೀಸ್ ಆಯುಕ್ತ ಬಿ ದಯಾನಂದ್

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ತನಿಖೆ ಹಾದಿ ಸಾಗುತ್ತಿದೆ.

ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಗಂಭೀರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿ ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್ಪೆಕ್ಟರ್​ಗಳು ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ಉತ್ತರಿಸಿದ ಅವರು, ಇದೆಲ್ಲ ತನಿಖೆಯ ಭಾಗ, ಅವುಗಳನ್ನು ಹೇಳಲು ಆಗಲ್ಲ ಎಂದರು. ವ್ಯಕ್ತಿ ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದರು.

No Comments

Leave A Comment