ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಇಲ್ಲಿದೆ ಬದಲಿ ಮಾರ್ಗ
ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗದ ವಿವರ ಈ ಕೆಳಗಿನಂತಿದೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾಗಿ, ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ತೀರ್ಥಹಳ್ಳಿ–ಮಾಸ್ತಿಕಟ್ಟೆ– ಸಿದ್ದಾಪುರ– ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಲೆನಾಡಿನ ಕೆಲಭಾಗದಲ್ಲಿ ಅಂದರೆ ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇಂದು (ಜೂನ್ 27) ತುಂಗಾ ಜಲಾಶಯದಿಂದ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.