ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮುಡಾ ಹಗರಣ ಸಂಬಂಧ ಮೈಸೂರು ಚಲೋ: ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು.

ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು. ಆದರೆ, ಮೈಸೂರು ರಸ್ತೆಯ ಕದಂಬ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಮುಂದಕ್ಕೆ ತೆರಳಲು ಪೊಲೀಸರು ಅವಕಾಶ ನೀಡಲಿಲ್ಲ. ಅವರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು. ನಂತರ ಕಣಿಮಿಣಕೆಯ ಟೋಲ್ ಗೇಟ್ ಬಳಿ ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಬಂದ್ ಮಾಡಿ‌ ಪ್ರತಿಭಟನೆ‌ ನಡೆಸಲಾಯಿತು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಸರ್ಕಾರ ಒಂದಿಲ್ಲೊಂದು ಹಗರಣ ಮಾಡುತ್ತಿದೆ. ಮೈಸೂರಿನಲ್ಲಿ ನಡೆದಿರುವ ಭೂ ಹಗರಣ ದೊಡ್ಡಮಟ್ಟದ್ದು.ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಲಾಭ ತಂದುಕೊಡುವ ಸಲುವಾಗಿ ಕೆಲವು ಅಕ್ರಮಗಳನ್ನು ಮಾಡಲಾಗಿದೆ. ಇದನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸಿದ್ದೇವೆ. ಅದಕ್ಕೆ ರಾಜ್ಯ ಸರ್ಕಾರ ಒಪ್ಪಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ತಡೆಯುವ ಸಾಮರ್ಥ್ಯವಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

No Comments

Leave A Comment