ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ, ಜುಲೈ 15: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್ನ ನ್ಯಾ. ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣ ರದ್ದುಗೊಳಿಸುವ ಸಂಬಂಧ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023 ರ ಅಕ್ಟೋಬರ್ 19 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶನ
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ಪೀಠ, ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.
ಡಿಕೆ ಶಿವಕುಮಾರ್ ಪರ ವಕೀಲರ ವಾದವೇನು?
ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಕಾಯ್ದೆಯಡಿ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಸಿಬಿಐ ಕೂಡ ಅದರ ವಿಚಾರಣೆ ನಡೆಸುವುದು ಹೇಗೆ? ಇದು ಅಕ್ರಮ ಎಂದು ಅವರು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಪೀಠ, ನಿಮ್ಮ ಮೇಲೆ ಪಿಸಿ ಆ್ಯಕ್ಟ್ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪಿಸಿ ಆ್ಯಕ್ಟ್ ಅಡಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಇದರಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಕ್ಷಮಿಸಿ ಎಂದಿತು.