ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗೋಡೆ ಕುಸಿತ: 9 ಮಕ್ಕಳು ಸಾವು
ಸಾಗರ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಂದು ಭಾನುವಾರ ಗೋಡೆ ಕುಸಿದು ಒಂಬತ್ತು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ.
ರೆಹ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಶಹಪುರದ ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಡೆ ಕುಸಿದ ಘಟನೆಯಲ್ಲಿ 10 ರಿಂದ 15 ವರ್ಷ ವಯಸ್ಸಿನ ಒಂಬತ್ತು ಮಕ್ಕಳು ಮೃತಪಟ್ಟಿದ್ದಾರೆ ಎಂದು ಸಾಗರ ವಿಭಾಗೀಯ ಆಯುಕ್ತ ವೀರೇಂದ್ರ ಸಿಂಗ್ ರಾವತ್ ದೂರವಾಣಿಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಕೆಲವು ಮಕ್ಕಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸ್ಥಳದಿಂದ ಎಲ್ಲಾ ಅವಶೇಷಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಆರ್ಯ ತಿಳಿಸಿದ್ದಾರೆ.
ಮಕ್ಕಳ ಸಾವಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿದ್ದು, ಪ್ರತಿ ಕುಟುಂಬಕ್ಕೆ ಸರ್ಕಾರವು 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.