ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಕಿಡಿಗೇಡಿಗಳ ದಾಳಿ
ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಸಮುದಾಯದ ಮುಖಂಡರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಕುರಿತು ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿದ ಅವರು, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ಬಳಿಕ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಅನುಸಾರ, ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರು ಢಾಕಾದ ಹಲವಾರು ಪ್ರಮುಖ ಸ್ಥಳಗಳಿಗೆ ಬೆಂಕಿ ಹಚ್ಚಿದ್ದಾರೆ.