ಕಾಂಗ್ರೆಸ್ ನಾಯಕರಿಂದ ‘ರಾಜಭವನ ಚಲೋ’; ಕುಮಾರಸ್ವಾಮಿ, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಶನಿವಾರ ‘ರಾಜಭವನ ಚಲೋ’ ನಡೆಸಿದರು.
ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷವು ‘ರಾಜಭವನ ಚಲೋ’ ಹಮ್ಮಿಕೊಂಡಿದೆ ಎಂದರು.
ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು ಎಂಬ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾವು ‘ರಾಜಭವನ ಚಲೋ’ ಹಮ್ಮಿಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಅಲ್ಲ. ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’’ ಎಂದರು.
ರಾಜ್ಯಪಾಲರ ಕಚೇರಿಯು ಪಕ್ಷದ ಕಚೇರಿಯಾಗಬಾರದು ಎಂಬ ಉದ್ದೇಶದಿಂದ ಈ ‘ರಾಜಭವನ ಚಲೋ’ ಹಮ್ಮಿಕೊಂಡಿದ್ದು, ರಾಜ್ಯಪಾಲರು ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ. ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು. ಇಲ್ಲಿ ಯಾರೂ ಕೂಡ ಶಾಶ್ವತ ಅಲ್ಲ ಎಂದರು.
ರಾಜ್ಯಪಾಲರ ಪೀಠ ಪವಿತ್ರವಾದದ್ದು. ಅದು ಸಂವಿಧಾನ ರಕ್ಷಿಸುವ ಪೀಠ. ರಾಜ್ಯಪಾಲರ ಕಚೇರಿ ಸರ್ಕಾರವನ್ನು ರಕ್ಷಿಸುವ ಪೀಠವಾಗಿದೆ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ. ಈ ಕಚೇರಿಯಿಂದ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಆಗಬಾರದು. ಹೀಗಾಗಿ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ನಮ್ಮ ಸಚಿವ ಸಂಪುಟದ ವಿಚಾರದ ಬಗ್ಗೆಯೂ ಮನವರಿಕೆ ಮಾಡಿದ್ದೇವೆ. ಎಲ್ಲಾ ವಿಚಾರಗಳಲ್ಲೂ ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.
ಇದಕ್ಕೂ ಮುನ್ನ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸಿದ್ದರಾಮಯ್ಯ, ಅವರ ಸಂಪುಟ ಸಹೋದ್ಯೋಗಿಗಳು, ಕಾಂಗ್ರೆಸ್ ಶಾಸಕರು ಮತ್ತು ಸಂಸದರು ರಾಜ್ಯಪಾಲರ ನಡೆ ಖಂಡಿಸಿ ಧರಣಿ ನಡೆಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆ ನಡೆಸಲು ಮತ್ತು ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಯುತ್ತಿದೆ.