ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬಯಲುಸೀಮೆಗೆ ನೀರುಣಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಎತ್ತಿನಹೊಳೆ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್ಗಳಿಗೂ ಚಾಲನೆ ನೀಡಲಾಯಿತು.
ಇದಕ್ಕೂ ಮೊದಲು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಹಿಸಿದ್ದರು.
ಹೋಮ ಹಾಗೂ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಈ ವರ್ಷ ಶೇ.50ರಷ್ಟು ಕಾಮಗಾರಿ ಪೂರ್ಣಗೊಳ್ಳಲಿದ್ದು, ಹೆಚ್ಚಿನ ನೀರು ಸಂಗ್ರಹಿಸುವ ಪ್ರಯತ್ನವೂ ನಡೆಯುತ್ತಿದೆ ಎಂದು ಹೇಳಿದರು.
ಒಂದು ನಿರ್ದಿಷ್ಟ ಸಮುದಾಯ ಅಥವಾ ಪ್ರದೇಶದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತಿಲ್ಲ. ಯೋಜನೆಯು ಅನೇಕರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು.
ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರ ವಿರೋಧ ಪಕ್ಷ ನಾಯಕರ ಟೀಕೆಗಳಿಗೆ ಕಿವಿಕೊಡುವುದಿಲ್ಲ. ಯೋಜನೆ ಯಶಸ್ಸಿನತ್ತ ನಾವು ಗಮನ ಹರಿಸುತ್ತೇವೆಂದು ಹೇಳಿದರು.