ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಕಲ್ಯಾಣ ಕರ್ನಾಟಕ ಉತ್ಸವ: ರೂ.1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದರು.
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ತಲಾ 200 ಕೋಟಿ ರೂ.ಗಳನ್ನು ನೀಡಲಾಗುವುದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ ಸಂಪರ್ಕ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಸುಧಾರಿಸಲು “ಕಲ್ಯಾಣ ಪಥ” ಎಂಬ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.ಕಲ್ಯಾಣಪಥ ಯೋಜನೆಯಡಿ ರಾಜ್ಯ ಸರ್ಕಾರ ರೂ. 1,000 ಕೋಟಿ ವೆಚ್ಚದಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು, ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸಲು ಅಗತ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಸಿದ್ಧವಿದ್ದು, ಏಮ್ಸ್ ಆರಂಭಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಬಳ್ಳಾರಿಯಲ್ಲಿ ಅಸಂಘಟಿತ ಜೀನ್ಸ್ ಕೈಗಾರಿಕೆಗಳನ್ನು ಸಂಘಟಿಸಿ ಜೀನ್ಸ್ ಅಪ್ಯಾರಲ್ ಪಾರ್ಕ್ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವದರ್ಜೆ ಮಟ್ಟಕ್ಕೆ ಏರಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ. ಘೋಷಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಮಂಡಳಿಯು 5,000 ಕೋಟಿ ರೂ. ಮೊತ್ತಕ್ಕೆ ಸಲ್ಲಿಸಿದ ಕ್ರಿಯಾ ಯೋಜನೆಗೆ ನಮ್ಮ ಸರ್ಕಾರ ಈಗಾಗಲೆ ಅನುಮೋದನೆ ನೀಡಿದ್ದು, ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿ ನಿರೀಕ್ಷಿಸಲಾಗಿದೆ ಎಂದರು.