ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

MUDA Case ಕುರಿತು ಹೈಕೋರ್ಟ್ ತೀರ್ಪು: ಸತ್ಯಕ್ಕೆ ಜಯ ಸಿಗಲಿದೆ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ- ಸಿದ್ದರಾಮಯ್ಯ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಸತ್ಯಕ್ಕೆ ಜಯ ಸಿಗಲಿದೆ. ತನಿಖೆಯನ್ನು ಎದುರಿಸಲು ನಾನು ಹಿಂಜರಿಯುವುದಿಲ್ಲ, ಕಾನೂನಿನಡಿಯಲ್ಲಿ ಅಂತಹ ತನಿಖೆಗೆ ಅನುಮತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಜ್ಞರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಕಾನೂನು ಮತ್ತು ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದ ಅವರು, ಈ ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ತನಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್‌ನ ಈ ಸೇಡಿನ ರಾಜಕಾರಣದ ವಿರುದ್ಧ ನಮ್ಮ ನ್ಯಾಯಾಂಗ ಹೋರಾಟ ಮುಂದುವರಿಯುತ್ತದೆ. ನಾನು ತೀರ್ಪಿನ ಕಾಪಿಯನ್ನು ಸಂಪೂರ್ಣವಾಗಿ ಓದಿಲ್ಲ. ಅದನ್ನು ಓದಿದ ನಂತರ ಮತ್ತೊಮ್ಮೆ ಮಾತನಾಡುತ್ತೇನೆ ಎಂದರು.

ಅಂತೆಯೇ, ‘ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.

ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದರು.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

No Comments

Leave A Comment