ಉಪ ಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಸಂಡೂರಿನಲ್ಲಿ ಬಂಗಾರು ಹನುಮಂತು NDA ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯೇ ದಿನವಾದ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಂಸದ ಬಿ. ರಾಘವೇಂದ್ರ ಹಾಗೂ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನಾ ಕೆಂಗಲ್ ಅಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸುವ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಪಟ್ಟಣದ ಶೇರು ಹೋಟೆಲ್ ವೃತ್ತದಿಂದ ಸಾತನೂರು ವೃತ್ತದ ಬಳಿ ಇರುವ ಚುನಾವಣಾ ಅಧಿಕಾರಿ ಕಚೇರಿ ಕಚೇರಿಯವರೆಗೂ ಸುಮಾರು ಅರ್ಧ ಕಿಲೋ ಮೀಟರ್ ದೂರ ನಡೆದ ರೋಡ್ ಶೋ ನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್. ಸದಾನಂದಗೌಡ, ಅಶ್ವತ್ಥ ನಾರಾಯಣ ಮತ್ತಿತರ ನಾಯಕರು ಪಾಲ್ಗೊಂಡರು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನನಗೆ ಅನಿರೀಕ್ಷಿತವಾಗಿ ಟಿಕೆಟ್ ಸಿಕ್ಕಿದೆ. ಆದರೆ, ಗೆಲ್ಲುವ ವಿಶ್ವಾಸದಿಂದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮನ್ನು ಆಯ್ಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ದೇವೇಗೌಡ, ಕುಮಾರಸ್ವಾಮಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಿದ್ದು, ಅವರು ಮಾಡಿರುವ ಕೆಲಸಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.
ಕುಮಾರಸ್ವಾಮಿ ಮಾತನಾಡಿ, ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆಲ್ಲುವ ಮೂಲಕ ಕಾಂಗ್ರೆಸ್ ರಾಜಕೀಯ ಪಿತೂರಿಗೆ ಅಂತ್ಯ ಹಾಡಲಾಗುವುದು ಎಂದರು. ಬಿಜೆಪಿ-ಜೆಡಿಎಸ್ ಅವಧಿಯಲ್ಲಿ ಚನ್ನಪಟ್ಟಣದಲ್ಲಿ ಅಭಿವೃದ್ಧಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬರೀ ಮಾತನಾಡಿರುವುದು ಹೊರತುಪಡಿಸಿದರೆ ಕ್ಷೇತ್ರದಲ್ಲಿ ಬೇರೆ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿ. ಪಿ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದ ಅವರ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಚುನಾವಣೆಯಾಗಿದೆ.
ಅತ್ತ ಸಂಡೂರಿನಲ್ಲಿ ಬಂಗಾರು ಹನುಮಂತು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ತಹಸೀಲ್ದಾರ್ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಶ್ರೀಮುಲು ಮತ್ತಿತರ ನಾಯಕರ ಸಮ್ಮುಖದಲ್ಲಿ ಬಂಗಾರು ಹನುಮಂತು ತಮ್ಮ ಉಮೇದುವಾರಿ ಸಲ್ಲಿಸಿದರು.
ಇದಕ್ಕೂ ಮುನ್ನಾ ನಡೆದ ರೋಡ್ ಶೋ ನಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ವೈ. ವಿಜಯೇಂದ್ರ, ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿ. ಶ್ರೀರಾಮುಲು ಅವರನ್ನು ಸೋಲಿಸಲಾಗಿದೆ. ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಕರೆ ನೀಡಿದರು.