ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಉತ್ತರ ಪ್ರದೇಶ: ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ; ಪೊಲೀಸರಿಂದ ಅಶ್ರುವಾಯು ಪ್ರಯೋಗ, 10 ಮಂದಿ ಬಂಧನ
ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಪೊಲೀಸರು ಹಾಗೂ ಸಮೀಕ್ಷಾ ತಂಡದ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ.
ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಸೀದಿಯ ಮುಖ್ಯಸ್ಥರು ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದರಾದರೂ ಪ್ರಯತ್ನಗಳು ವಿಫಲವಾದವು. ಬಳಿಕ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಶುರುವಾಗಿದ್ದು, ಹಿಂಸಾಚಾರ ಶುರುವಾಗಿದೆ, ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಸಿಡಿಸಿದರು.
ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಬಾಬರ್‌ನ ಕಾಲದಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ಹಿಂದೂ ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಆರೋಪಿಸಿ ವಕೀಲ ವಿಷ್ಣು ಶಂಕರ್ ಜೈನ್ ಎನ್ನುವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ವಿಡಿಯೊ ಮತ್ತು ಛಾಯಾಗ್ರಹಣ ಬಳಸಿ ಸಮೀಕ್ಷೆ ನಡೆಸುವಂತೆ ಆದೇಶ ನೀಡಿತ್ತು.
ಇದರಂತೆ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಲು ಮುಂದಾಗಿದ್ದು, ಸ್ಥಳದಲ್ಲಿದ್ದ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಾಟ ನಡೆಸಿದವರು ಹಾಗೂ ಪ್ರಚೋದನೆ ನೀಡಿದವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಅವರು ಹೇಳಿದ್ದಾರೆ.
ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಆದರೆ, ಇದೀಗ ಪರಿಸ್ಥಿತಿ ಶಾಂತಿಯುತವಾಗಿದ್ದು, ಸಮೀಕ್ಷೆ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.