ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರದ ವರ್ಚಸ್ಸು ವೃದ್ಧಿಗೆ ನಿರ್ಧಾರ; CM-DCMಗೆ ಹೈಕಮಾಂಡ್ ದಿಢೀರ್ ಬುಲಾವ್, ಸಂಪುಟಕ್ಕೆ ಮೇಜರ್ ಸರ್ಜರಿ?

ಬೆಂಗಳೂರು: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್’ನಲ್ಲಿ ಮಂಗಳವಾರ ವಿಚಾರಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ದಿಢೀರ್ ಬುಲಾವ್ ನೀಡಿದೆ.

ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ ಧಕ್ಕೆಯುಂಟಾಗಿದ್ದು, ಈ ವರ್ಚಸ್ಸನ್ನು ವೃದ್ದಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಈ ಸಭೆಗೆ ಆಗಮಿಸುವಂತೆ ಹೈಕಮಾಂಡ್ ಈಗಾಗಲೇ ರಾಜ್ಯ ನಾಯಕತ್ವಕ್ಕೆ ಬುಲಾವ್ ನೀಡಿದೆ. ಇದರ ಬೆನ್ನಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಇದ್ದಾರೆ. ಈ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಚರ್ಚೆ ವೇಳೆ ಕಾಲ್ತುಳಿತ ನಡೆದ ದಿನ ಹಾಗೂ ನಂತರ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸಿಎಂ ಹಾಗೂ ಡಿಸಿಎಂ ಹೈಕಮಾಂಡ್’ಗೆ ವಿವರಿಸಲಿದ್ದಾರೆ.

ಇದು ಸರ್ಕಾರದ ತಪ್ಪಲ್ಲ, ಬದಲಿಗೆ ಪೊಲೀಸರು ಮತ್ತು ಕಾರ್ಯಕ್ರಮ ಆಯೋಜಕರ ವೈಫಲ್ಯ ಎಂದು ಅವರು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

“ಗಂಭೀರ ಕರ್ತವ್ಯ ಲೋಪ”ಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಐದು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಗುಪ್ತಚರ ಇಲಾಖೆಯ ಎಡಿಜಿಪಿಯನ್ನು ವರ್ಗಾಯಿಸಿದೆ ಎಂದು ಅವರು ಕೇಂದ್ರ ನಾಯಕರಿಗೆ ವಿವರಿಸಲಿದ್ದಾರೆ.

ಮುಖ್ಯಮಂತ್ರಿ ತಮ್ಮ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್ ಅವರನ್ನು ಸಹ ಹುದ್ದೆಯಿಂದ ತೆಗೆದುಹಾಕಿದ್ದಾರೆ ಮತ್ತು ಆರ್‌ಸಿಬಿ, ಡಿಎನ್‌ಎ ಮತ್ತು ಕೆಎಸ್‌ಸಿಎ ಪ್ರತಿನಿಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆಯ ತನಿಖೆಗಾಗಿ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಅವರ ಏಕವ್ಯಕ್ತಿ ಆಯೋಗವನ್ನು ಸಹ ರಚಿಸಿರುವ ಕುರಿತು ವಿವರಿಸಲಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ದೂರವಾಣಿ ಮೂಲಕ ವಿವರಗಳನ್ನು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಕೆಲವು ತಿಂಗಳುಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸೇರಿದಂತೆ ಇತರೆ ಚುನಾವಣೆಗಳ ನಡೆಯುವ ಸಾಧ್ಯತೆ ಇರುವುದರಿಂದ ಪಕ್ಷ ಮತ್ತು ಸರ್ಕಾರದ ಇಮೇಜ್ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದರೂ, ರಾಜ್ಯದಾದ್ಯಂತ ಹಲವು ಯುವಕರು ಕಾರ್ಯಕ್ರಮಕ್ಕೆ ಬಂದಿದ್ದಪು, ಈ ವೇಳೆ ದುರ್ಘಟನೆ ಸಂಭವಿಸಿರುವುದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರಿದೆ. ಕೇಂದ್ರ ನಾಯಕರು ಸಭೆಯಲ್ಲಿ ಈ ಅಂಶಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸಂಪುಟ ಪುನಾರಚನೆ, ಹೊಸ ಎಂಎಲ್‌ಸಿ ಪಟ್ಟಿ ಮತ್ತು ರಾಜ್ಯದ ಇತರ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment