.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ!
ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಜರುಗಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಸ್ಥಳದಲ್ಲಿ ಕಿರುಚಾಟ ಮತ್ತು ಆಕ್ರಂದನ ಮುಗಿಲು ಮುಟ್ಟಿದೆ.
ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದ್ದು ಕುಟುಂಬದ ಹಿರಿಯ ಸದಸ್ಯರು ಈ ದುರಂತದಲ್ಲಿ ಬಲಿಯಾಗಿದ್ದಾರೆ. ದೇವಿಯ ದರ್ಶನ ಪಡೆದು ಪುನೀತರಾಗಬೇಕೆಂದು ಹೊರಟಿದ್ದ ಭಕ್ತರು ವಿಧಿಯ ಕರಾಳ ಆಟಕ್ಕೆ ಸಿಲುಕಿ ಸಾವಿನ ಮನೆ ಸೇರಿದ್ದಾರೆ. ಗಾಯಾಳುಗಳ ಸ್ಥಿತಿ ಕೂಡ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಮುನಿರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ನಜ್ಜುಗುಜ್ಜಾಗಿದ್ದ ಟ್ರ್ಯಾಕ್ಟರ್‌ನ ಭಾಗಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಗಂಭೀರವಾಗಿ ಗಾಯಗೊಂಡಿರುವ ಹತ್ತಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆ ಮತ್ತು ಕೊಪ್ಪಳದ ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ತಿಳಿಸಿದ್ದಾರೆ.