..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ಉಡುಪಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಿತು.

ಕಾಂಗ್ರೆಸ್ ಭವನದ ಎದುರು ಸೇರಿದ್ದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, “ಸುಮಾರು 12 ವರ್ಷಗಳ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಒಬ್ಬ ಸಚಿವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹತ್ವದ ಬೆಳವಣಿಗೆ. ಇಷ್ಟೊಂದು ವರ್ಷಗಳಲ್ಲಿ ಯಾವುದೇ ಪ್ರಕರಣಕ್ಕೆ ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ ನೀಟ್ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಹೋರಾಟ, ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟ ಹಾಗೂ ಸಾರ್ವಜನಿಕರ ಒತ್ತಡದ ಫಲವಾಗಿ ಈ ರಾಜೀನಾಮೆ ಸಂಭವಿಸಿದೆ.

ಇದು ಪ್ರಜಾಪ್ರಭುತ್ವದ ಗೆಲುವಾಗಿದೆ” ಎಂದು ಹೇಳಿದರು.”ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರುವ ಈ ಪ್ರಕರಣದ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಮುಂಚೂಣಿಯಲ್ಲಿ ಹೋರಾಟ ನಡೆಸಿದೆ.

ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಬಿಜೆಪಿ ಸರ್ಕಾರದ ವಿರುದ್ಧ ನಿರಂತರ ಪ್ರತಿಭಟನೆ ನಡೆಸಲಾಗಿದೆ. ವಿದ್ಯಾರ್ಥಿಗಳ ನ್ಯಾಯಕ್ಕಾಗಿ ನಡೆದ ಹೋರಾಟದ ಫಲವಾಗಿ ದೊರೆತಿರುವ ಈ ರಾಜೀನಾಮೆ ವಿದ್ಯಾರ್ಥಿಗಳ ಮೊದಲ ಗೆಲುವಾಗಿದೆ. ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದೆ” ಎಂದು ಅವರು ಆರೋಪಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, “ವಿದ್ಯಾರ್ಥಿಗಳ ಪ್ರತಿಭಟನೆಯಿಂದ ದೇಶದಲ್ಲಿ ಮೊದಲ ವಿಕೆಟ್ ಪತನವಾಗಿದೆ. ವಿದ್ಯಾರ್ಥಿಗಳ ಹೋರಾಟದ ಪರಿಣಾಮ ಪ್ರಧಾನಿ ನರೇಂದ್ರ ಮೋದಿ ಸಚಿವರ ರಾಜೀನಾಮೆ ಪಡೆದಿದ್ದಾರೆ.

ಮುಂದಿನ ದಿನಗಳಲ್ಲಿ ನೀಟ್ ಪ್ರಶ್ನೆಪತ್ರಿಕೆ ಹಗರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ಕೂಡ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ವಿಜಯೋತ್ಸವದಲ್ಲಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಎಐಸಿಸಿ ವೀಕ್ಷಕ ಹಿಮ್ಮತ್ ಸಿಂಗ್, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ವಿಶ್ವಾಸ್ ಅಮೀನ್, ಕೃಷ್ಣ ಶೆಟ್ಟಿ ಬಜಗೋಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

No Comments

Leave A Comment