.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು ಗುರುತಿಸಲಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬುವವರ ಜೊತೆ ಮದುವೆಯಾಗಿದ್ದರು. ಗುಲ್ಬರ್ಗಾ ನಿವಾಸಿಗಳಾದ ಈ ದಂಪತಿ ಕಳೆದ 5 ವರ್ಷದಿಂದ ನೆಲಮಂಗಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕಳೆದ 1 ವರ್ಷದ ಹಿಂದೆ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ರಂಜಿತಾ ಲಕ್ಷಾಂತರ ರೂ. ಹಣ ಕಳೆದುಕೊಂಡಿದ್ದರು. ಅಲ್ಲದೇ ರಂಜಿತಾಳ ತಾಯಿ ಹಾಗೂ ಗಂಡ ಈಗಾಗಲೇ ಆಕೆ ಮಾಡಿದ್ದ ಸುಮಾರು 15 ಲಕ್ಷ ರೂ. ಸಾಲ ತೀರಿಸಿದ್ದರು. ಇಷ್ಟಾದರೂ ಕೂಡ ಆನ್‌ಲೈನ್ ಗೇಮಿಂಗ್ ಬಿಟ್ಟಿರಲಿಲ್ಲ. ಮತ್ತೆ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಮೃತಳ ಪತಿ ಅರುಣ್ ಅವರು ಗುಲ್ಬರ್ಗಾಗೆ ಕೆಲಸ ನಿಮಿತ್ತ ತೆರಳಿದ್ದರು. ಈ ವೇಳೆ ಮನೆಯಲ್ಲಿ 7 ವರ್ಷದ ಮಗನ ಜೊತೆ ಇದ್ದ ರಂಜಿತಾ ಕಳೆದ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment