....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ತೂಗುದೀಪ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ವಿಚಾರಣಾ ನ್ಯಾಯಾಲಯವು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಬೇಕೆಂದು ದರ್ಶನ್ ಪರವಾಗಿ ಇದೀಗ ಮತ್ತೊಮ್ಮೆ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ನಟ ದರ್ಶನ್ ವಿರೋಧಿಗಳ ಪ್ರಭಾವ ಮತ್ತು ಚಿತಾವಣೆಗೆ ಒಳಗಾಗಿ, ಪ್ರದೋಷ್‌ ತಮ್ಮ ಸ್ವಾರ್ಥಕ್ಕಾಗಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಕಳೆದ 2 ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸದೆ, ಈಗ ದಿಢೀರನೆ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ಅನುಮಾನಾಸ್ಪದವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಸದ್ಯ ಜೈಲಿನಲ್ಲಿರುವ ಪ್ರದೋಷ್‌ ಅನಧಿಕೃತವಾಗಿ ಮೊಬೈಲ್ ಬಳಸಿ ತಮ್ಮ ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎನ್‌ಸಿಆರ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಕೂಡ ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಅನಧಿಕೃತ ಮೊಬೈಲ್ ಅನ್ನೇ ಬಳಸಿ ಮಾಫಿ ಸಾಕ್ಷಿಯಾಗಲು ಒಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೆಮೊವನ್ನು ಪರಿಗಣಿಸದೆ ಆದೇಶ ಹೊರಡಿಸಲಾಗಿದ್ದು, ಮಾಫಿ ಸಾಕ್ಷಿಗೆ ಒಪ್ಪಿಗೆ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ಪವಿತ್ರಾ ಗೌಡ ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಲ್ಲಿ 2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಬರ್ಬರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.

ಸಾಕ್ಷ್ಯ ನಾಶ ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾಗಿದ್ದ ಆರೋಪ ಎದುರಿಸುತ್ತಿರುವ ಪ್ರಕರಣದ 14ನೇ ಆರೋಪಿ ಪ್ರದೋಷ್‌, ಇತ್ತೀಚೆಗಷ್ಟೇ ತಾವು ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ಕೋರ್ಟ್‌ ಮುಂದೆ ಬಹಿರಂಗಪಡಿಸುವುದಾಗಿ ಹೇಳಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಇದನ್ನು ಬೆಂಗಳೂರಿನ ಸಿಸಿಹೆಚ್‌ ನ್ಯಾಯಾಲಯ ಪುರಸ್ಕರಿಸಿತ್ತು.

No Comments

Leave A Comment